ಮಡಿಕೇರಿ, ಆ. 10: ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿ.ಪಂ.ಸಿಇಓ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಡಯಟ್ ಪ್ರಾಂಶುಪಾಲ ದೊಡ್ಡ ಮಲ್ಲಪ್ಪ, ಐಟಿಡಿಪಿ ಅಧಿಕಾರಿ ಕೆ.ವಿ. ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆಶ್ರಮ ಶಾಲೆ ಮುಖ್ಯಸ್ಥರು ಮತ್ತಿತರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಆಶ್ರಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವದು, ಶಿಕ್ಷಕರಿಗೆ ತರಬೇತಿ ನೀಡುವದು, ನಲಿ-ಕಲಿ ಶಿಕ್ಷಣ ನೀಡುವದು ಸೇರಿದಂತೆ ಮತ್ತಿತರ ನಿರ್ಣಯವನ್ನು ಕೈಗೊಳ್ಳಲಾಯಿತು.

ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ದೊರೆಯುವ ಶಿಕ್ಷಣ ಮಾದರಿಯಲ್ಲಿ ಆಶ್ರಮ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಇನ್ನಷ್ಟು ಮೂಲ ಸೌಲಭ್ಯ ಕಲ್ಪಿಸುವದರ ಜೊತೆಗೆ ಪಠ್ಯದ ಜೊತೆಗೆ ಪಠ್ಯೇತರ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳ ಕ್ರೀಯಾಶೀಲತೆಗೆ ಒತ್ತು ನೀಡುವದು, ರೇಡಿಯೋ ಶಿಕ್ಷಣ ಮತ್ತಿತರ ಸಂಬಂಧ ಚರ್ಚೆ ನಡೆಯಿತು. ಡಯಟ್ ಪ್ರಾಂಶುಪಾಲ ದೊಡ್ಡಮಲ್ಲಪ್ಪ ಅವರು ಆಶ್ರಮ ಶಾಲೆಯ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದ್ದು, ಈ ಸಂಬಂಧ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ದಿಸೆಯಲ್ಲಿ ಅಗತ್ಯ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವ ರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮತ್ತಿತರರು ಹಲವು ಸಲಹೆ ನೀಡಿದರು.