ಮಡಿಕೇರಿ, ಜ. 1: ಜೀವನದಿ ಕಾವೇರಿ ಮೂಲದಿಂದಲೇ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವದರೊಂದಿಗೆ ನದಿ ಸಂರಕ್ಷಣೆಗೆ ಯೋಜನೆಗಳನ್ನು ರೂಪಿಸುವಂತೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರು ಸಿಎಸ್‍ಆರ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಮಗ್ರ ಮಾಹಿತಿಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಸಲಾಯಿತು.

ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯಗಳು, ಕಲುಷಿತ ನೀರು ನದಿಗೆ ನೇರವಾಗಿ ಸೇರುತ್ತಿರುವದು. ನದಿ ತಟಗಳು ಒತ್ತುವರಿಯಾಗುವದ ರೊಂದಿಗೆ ಅಂಗಡಿ ಮುಂಗಟ್ಟುಗಳು, ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ನದಿ ಮಾಲಿನ್ಯಗೊಳಿಸಲು ಪ್ರಮುಖ ಕಾರಣವಾಗಿವೆ.

ಈ ಬಗ್ಗೆ ಕಂಡುಬಂದ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸಮಿತಿಯ ಸಂಚಾಲಕರಾದ ಚಂದ್ರಮೋಹನ್ ತಿಳಿಸಿದ್ದಾರೆ. ಮನವಿ ಪತ್ರದಲ್ಲಿ ಕಾವೇರಿ ನದಿ ಹರಿಯುವ ಜಿಲ್ಲೆಯೊಳಗೆ 23 ಗ್ರಾಮ ಪಂಚಾಯಿತಿಗಳ ಹಾಗೂ 1 ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾಸ್ತವಾಂಶದ ಬಗ್ಗೆ ಮಾಹಿತಿ ಒದಗಿಸಲಾಗಿದೆ. ನದಿ ಹರಿಯುವ ತಟಗಳ ಗ್ರಾಮಗಳ ವ್ಯಾಪ್ತಿಯಲ್ಲಿ ಕಲುಷಿತ ನೀರು ನೇರವಾಗಿ ನದಿಗೆ ಸೇರುವದನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಸೌಲಭ್ಯಗಳನ್ನು ಕಲ್ಪಿಸಲು ಕಾರ್ಯಯೋಜನೆ ರೂಪಿಸುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಈ ಎಲ್ಲಾ ಗ್ರಾಮಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ನದಿ ಸಂರಕ್ಷಣೆಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವ ಮೂಲಕ ನದಿ ಕಲುಷಿಕೆ ತಪ್ಪಿಸಲು ಯೋಜನೆ ರೂಪಿಸುವಂತೆ ಮನವಿ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಅವರಿಗೆ ಸಮಿತಿ ಪ್ರಮುಖರು ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಮುಂದಿನ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಷಯದ ಬಗ್ಗೆ ಪ್ರಸ್ತಾಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದ್ದಾರೆ ಎಂದು ಚಂದ್ರಮೋಹನ್ ತಿಳಿಸಿದ್ದಾರೆ.

ಮನವಿ ಸಲ್ಲಿಸಿದ ಸಂದರ್ಭ ಸಮಿತಿಯ ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್, ಕೂರ್ಗ್ ಗ್ರೀನ್ ಸಿಟಿ ಫೋರಂ ಸಂಚಾಲಕ ಚೇಯಂಡ ಸತ್ಯ, ನದಿ ಜಾಗೃತಿ ಸಮಿತಿ ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್ ಇದ್ದರು.