ಮಡಿಕೇರಿ, ಅ. 28: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆಯ ಪ್ರಮಾಣ ತುಂಬಾ ಕುಂಠಿತ ಗೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಈಗಿನಿಂದಲೇ ಆರಂಭ ಗೊಂಡಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಾಗೂ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಲ್ಪಿಸುವಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ನಾಲ್ಕನೇ ಹಣಕಾಸು ಆಯೋಗದ ಅಧ್ಯಕ್ಷರ ಮುಂದೆ ಜನಪ್ರತಿನಿಧಿಗಳು ಒಕ್ಕೊರಲ ಧ್ವನಿಯಲ್ಲಿ ಆಗ್ರಹಿಸಿದರು.

ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಾಲ್ಕನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ಜಿ. ಚಿನ್ನಸ್ವಾಮಿ ಅಧ್ಯಕ್ಷತೆಯಲ್ಲಿ ಹಣಕಾಸು ಆಯೋಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿ.ಪಂ., ತಾ.ಪಂ. ಹಾಗೂ ಆಯ್ದ ಗ್ರಾ.ಪಂ. ಅಧ್ಯಕ್ಷರುಗಳ ಸಲಹೆ ಪಡೆಯುವ ಸಲುವಾಗಿ ಆಯೋಜಿಸಿದ ಸಭೆಯಲ್ಲಿ ಜನಪ್ರತಿನಿಧಿಗಳು ಒತ್ತಾಯಿಸಿದರು.

ರಾಜ್ಯ 4ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ಜಿ.ಚಿನ್ನಸ್ವಾಮಿ ಅವರು ಗ್ರಾಮೀಣ ಭಾಗದ ಜನರು ನಗರ ಪ್ರದೇಶದತ್ತ ವಲಸೆ ಹೋಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಜನಜೀವನವನ್ನು ಸರಿದೂಗಿಸುವ ನಿಟ್ಟಿನಲ್ಲಿ ನಗರದಲ್ಲಿರುವ ಮೂಲ ಸೌಲಭ್ಯಗಳನ್ನು ಗ್ರಾಮೀಣ ಜನತೆಗೆ ಕಲ್ಪಿಸಲು ಪ್ರಯತ್ನಿಸಬೇಕಿದೆ ಎಂದರು.

ಸರ್ಕಾರದಿಂದ ಬಿಡುಗಡೆ ಯಾಗುವ ಅನುದಾನವನ್ನು ಸದಸ್ಯರು ಹಂಚಿಕೆ ಮಾಡಿಕೊಳ್ಳುತ್ತಾರೆ. ಇದರಿಂದ ಕಾಮಗಾರಿಗಳು ಪೂರ್ಣಗೊಳ್ಳುವದಿಲ್ಲ. ಆದ್ದರಿಂದ ಆದ್ಯತೆ ಮೇಲೆ ಕಾಮಗಾರಿ ಗಳಿಗೆ ಒತ್ತು ನೀಡಬೇಕಿದೆ. ಇದರಿಂದ ಸುಧಾರಣೆ ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸರ್ಕಾರದಿಂದ ಬಿಡುಗಡೆ ಯಾಗುವ ಯಾವದೇ ಯೋಜನೆಗಳು ಒಂದು ಅಥವಾ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕಿದೆ. ಇದರಿಂದ ಹಣಕಾಸನ್ನು ಸದ್ಬಳಕೆ ಮಾಡಲು ಸಾಧ್ಯವಾಗಲಿದೆ. 2012 ರಿಂದ 2015 ರೊಳಗೆ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.