ಮಡಿಕೇರಿ, ಆ. 15: ಜನರಲ್ ತಿಮ್ಮಯ್ಯ ಮ್ಯೂಸಿಯಂ ಸುತ್ತಲಿನ ಜಾಗವನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಕ್ರಮಕೈಗೊಳ್ಳುವದಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತರಾಮ್ ಹೇಳಿದರು.

ಜಿಲ್ಲಾ ಆಸ್ಪತ್ರೆ, ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಹಾಗೂ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಸಚಿವರು ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಸಂಬಂಧ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿಯನ್ನು ಹಳೇ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಕಾಮಗಾರಿಯನ್ನು ಹಿಂದಿನ ಮಾದರಿಯಲ್ಲಿ ಉಳಿಸಿಕೊಂಡು ಅಚ್ಚುಕಟ್ಟಾಗಿ ಭವನ ನಿರ್ಮಾಣಕ್ಕೆ ನಿರ್ದೇಶನ ನೀಡಲಾಗಿದೆ. ಸ್ಮಾರಕ ಭವನ ಬಳಿ ಪ್ರಾದೇಶಿಕ ಸಾರಿಗೆ ಇಲಾಖೆಗೆ ಸೇರಿದ 2.50 ಎಕರೆ ಜಾಗವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಶಕ್ಕೆ ಪಡೆಯುವ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗುವದು ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ವೈದ್ಯಕೀಯ ಕಾಲೇಜು ತರಗತಿಯು ಸೆಪ್ಟೆಂಬರ್ 3 ರಿಂದ ಆರಂಭವಾಗಲಿದೆ. ವೈದ್ಯಕೀಯ ಕಾಲೇಜಿನ ಬಾಕಿ ಇರುವ ಕಾಮಗಾರಿ ಯನ್ನು ತ್ವರಿತವಾಗಿ ಪೂರ್ಣಗೊಳಿಸು ವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.

ಸುವರ್ಣ ಕರ್ನಾಟಕ ಸಮುಚ್ಚಯ ಭವನದ ನಿರ್ಮಾಣದ ಕಾಮಗಾರಿ ಇನ್ನೂ ಚಾಲನೆಗೊಳ್ಳ ದಿರುವದನ್ನು ಸಚಿವರ ಗಮನ ಸೆಳೆದಾಗ, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗು ವದು ಎಂದು ತಿಳಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಸುರಯ್ಯ ಅಬ್ರಾರ್, ವೈದ್ಯಕೀಯ ಕಾಲೇಜಿನ ನಿರ್ದೇಶಕ ಮಹೇಂದ್ರ, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಮುತ್ತಪ್ಪ ಮತ್ತಿತರರು ಇದ್ದರು.