ಮಡಿಕೇರಿ, ಆ. 6: ಪ್ಲಾಸ್ಟಿಕ್ ನಿಯಂತ್ರಣ ಮಾಡಿ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ ಕರೆ ನೀಡಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಓಡಿಪಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ನಿರ್ವಹಣೆ ಕುರಿತು ಕಾನೂನು ಶಿಬಿರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರದಿಂದ ಕಾನೂನು ಉಚಿತ ಸಲಹಾ ಕೇಂದ್ರ ನೂತನ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿ ದರು. ಪ್ಲಾಸ್ಟಿಕ್ ಬಳಕೆ ಜಿಲ್ಲೆಯಲ್ಲಿ ನಿಯಂತ್ರಣವಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಅಗತ್ಯ. ಜೊತೆಗೆ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಬಟ್ಟೆ ಬ್ಯಾಗ್ (ಚೀಲ) ದೊರೆಯುವಂತಾಗಬೇಕು ಎಂದು ಅಭಿಪ್ರಾಯಪಟ್ಟರು. ಕಾನೂನು ಸೇವಾ ಪ್ರಾಧೀಕಾರದಿಂದ ಮಹಿಳೆಯರು, ನಿರ್ಗತಿಕರಿಗೆ ಹೀಗೆ ಎಲ್ಲಾ ಕಡುಬಡವರಿಗೂ ಕಾನೂನು ಉಚಿತ ನೆರವು ಸಿಗಲಿದೆ. ಈ ಅವಕಾಶವನ್ನು ಸಂಬಂಧ ಪಟ್ಟವರು ಬಳಸಿಕೊಳ್ಳುವಂತಾಗಬೇಕು. ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ನ್ಯಾಯಾಧೀಶರು ಹೇಳಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಜಿ.ಆರ್. ಗಣೇಶನ್ ಅವರು ಮಾತನಾಡಿ, ಪ್ಲಾಸ್ಟಿಕ್ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿ ಸೇರ್ಪಡೆ ಯಾಗಿದೆ. ಆದರೆ ಪ್ಲಾಸ್ಟಿಕ್‍ನಿಂದ ಉಂಟಾಗುವ ತೊಂದರೆಗಳ ಬಗ್ಗೆ ಗಮನ ಹರಿಸುವದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ಪರಿಸರದೊಂದಿಗೆ ಸೇರಿಕೊಂಡಾಗ ಉಂಟಾಗುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಪರಿಸರ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ಸ್ವಯಂ ಪ್ರೇರಣೆಯಿಂದ ನಿಯಂತ್ರಣ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಅವರು ಮಾತನಾಡಿ, ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದಲ್ಲಿ ಮನುಷ್ಯ ಸೇರಿದಂತೆ ಪ್ರಾಣಿ ಪಕ್ಷಿಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ಪರಿಸರದಲ್ಲಿ ಸಮತೋಲನ ಅತ್ಯಗತ್ಯ. ಆ ನಿಟ್ಟಿನಲ್ಲಿ ನಾವುಗಳು ಬದಲಾಗಬೇಕು ಎಂದು ಅವರು ಹೇಳಿದರು. ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಉಚಿತ ಅರಿವು-ನೆರವು ನೀಡಲಾಗುತ್ತದೆ. ಕಾನೂನಿಂದ ವಂಚಿತ ರಾದವರೆಲ್ಲರೂ ಕಾನೂನು ಸೇವಾ ಪ್ರಾಧಿಕಾರದ ಸಹಕಾರ ಪಡೆಯ ಬಹುದಾಗಿದೆ. ಪ್ರತಿಯೊಬ್ಬರೂ ಪ್ರತಿಷ್ಠೆ ಬದಿಗೊತ್ತಿ ಸಮಾಜದಲ್ಲಿ ಅಭಿವೃದ್ಧಿಯತ್ತ ಮುಖ ಮಾಡಬೇಕು ಎಂದು ಸಲಹೆ ಮಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಮಾತನಾಡಿ, ಪ್ಲಾಸ್ಟಿಕ್ ಪದಾರ್ಥಗಳನ್ನು ಉಪಯೋಗಿಸುವದರಿಂದ ಲಿವರ್ ಹಾಗೂ ಕಿಡ್ನಿಗೆ ತುಂಬಾ ತೊಂದರೆ ಯಾಗಲಿದೆ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಯಂತ್ರಣ ಮಾಡಬೇಕು ಎಂದು ಅವರು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಿದೆ. ಆದರೂ ಇನ್ನೂ ಬಳಕೆಯಲ್ಲಿದೆ ಎಂಬದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ತೊಂದೆರೆಗಳ ಬಗ್ಗೆ ತಿಳುವಳಿಕೆ ನೀಡುವದು ಅತ್ಯಗತ್ಯವಾಗಿದೆ ಎಂದು ಸಲಹೆ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಅನ್ನಪೂರ್ಣೇಶ್ವರಿ, ಅಪರ ಸಿವಿಲ್ ನ್ಯಾಯಾಧೀಶರು ಬಿ.ಎನ್. ರಮೇಶ್ ಬಾಬು, ಓ.ಡಿ.ಪಿ. ಸಂಸ್ಥೆಯ ಜಿಲ್ಲಾ ಸಂಚಾಲಕಿ ಜಾಯ್ಸ್ ಮೇನೇಜಸ್ ಮತ್ತಿತರರು ಇದ್ದರು. ವಕೀಲರ ಸಂಘದ ಕಾರ್ಯದರ್ಶಿ ಪ್ರೀತಂ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ನಿರೂಪಿಸಿ, ವಂದಿಸಿದರು.