ಸುಂಟಿಕೊಪ್ಪ, ಅ. 8: ಯುವ ಜನತೆ ತನ್ನೊಳಗೆ ಸುಪ್ತವಾಗಿರುವ ಇಚ್ಛಾಶಕ್ತಿಯನ್ನು ಸಾದರಪಡಿಸುವ ಮೂಲಕ ಉತ್ತಮ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಇಲ್ಲಿ ಕಲಿತ ವಿಷಯಗಳನ್ನು ಹೊರಹೋದ ನಂತರ ಮರೆಯದೇ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಡಿ. ಚೆನ್ನಮ್ಮ ಎಜುಕೇಷನ್ ಸೊಸೈಟಿ ಅಧ್ಯಕ್ಷ ಲೇ. ಕರ್ನಲ್ ಬಿ.ವಿ.ಜಿ. ಕುಮಾರ್ ಮಾತನಾಡಿ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸ್ವಾರ್ಥವನ್ನು ಬದಿಗಿರಿಸಿ ಸೇವಾ ಮನೋಭಾವನೆ ರೂಢಿಸಿಕೊಳ್ಳಬೇಕು ಎಂದರು.

ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳ ಬೇಕು ಎಂದರು. ಮೊರಾರ್ಜಿ ದೇಸಾಯಿ ವಿಜ್ಞಾನ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕೆ.ಡಿ. ನಿತಾ ಮಾತನಾಡಿ ಇಲ್ಲಿ ಕಲಿಸುವ ಅನುಭವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಚೆನ್ನಮ್ಮ ಕಾಲೇಜಿನ ನಿರ್ದೇಶಕಿ ಚಿತ್ರಾ ಸುಬ್ಬಯ್ಯ, ಗರಗಂದೂರು ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ, ಹರದೂರು ಗ್ರಾ.ಪಂ.ಅಧ್ಯಕ್ಷೆ ಕೆ.ಸಿ. ಶೈಲಜಾ, ಮಾತನಾಡಿದರು.

ಚೆನ್ನಮ್ಮ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಪ್ರಾಸ್ತಾವಿಕ ನುಡಿಯಾಡಿ ಸ್ವಾಗತಿಸಿದರು. ಶಿಕ್ಷಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರೆ, ಶಿಬಿರಾರ್ಥಿಗಳಾದ ವಚನ ತಂಡ ಪ್ರಾರ್ಥಿಸಿದರು. ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.