ಸೋಮವಾರಪೇಟೆ, ಸೆ. 7: ತಾಲೂಕಿನ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವದಾಗಿ ಜನಪ್ರತಿನಿಧಿಗಳು ಭರವಸೆ ನೀಡಿದರು. ಪ್ರವಾಸೋದ್ಯಮ ಇಲಾಖೆಯಿಂದ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಹೆಚ್ಚಿನ ಶ್ರಮವಹಿಸಲಾಗುವದು ಎಂದು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಶ್ವಾಸನೆ ನೀಡಿದರು.ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಹೊನ್ನಮ್ಮನ ಕೆರೆಯಲ್ಲಿ ಬಾಗಿನ ಅರ್ಪಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಹೊನ್ನಮ್ಮನ ಕೆರೆ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ನಾಲ್ಕು ಲಕ್ಷ ರೂ.ಗಳನ್ನು ನೀಡುವದಾಗಿ ಘೋಷಿಸಿದರು.

ಸಾಕಷ್ಟು ವಿಸ್ತೀರ್ಣವುಳ್ಳ ಕೆರೆಯ ಅಭಿವೃದ್ಧಿ ಪಡಿಸುವದರೊಂದಿಗೆ ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ರಿವರ್ ರ್ಯಾಪ್ಟಿಂಗ್ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿದಲ್ಲಿ ಪ್ರವಾಸೋಧ್ಯಮ ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಅವರು ಅಭಿಪ್ರಾಯಿಸಿದರು.

ಈ ಸಂದರ್ಭ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ, ಹೊನ್ನಮ್ಮನ ಕ್ಷೇತ್ರದ ಅಭಿವೃದ್ಧಿಯೊಂದಿಗೆ ಇಲ್ಲಿನ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕಾದುದು ಗ್ರಾಮಸ್ಥರ ಕರ್ತವ್ಯ. ಪ್ರವಾಸೋಧ್ಯಮ ಇಲಾಖೆಯ ಮೂಲಕ ಸಾಕಷ್ಟು ಅನುದಾನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಕೊಡಗು ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಹೊನ್ನಮ್ಮನ ಕ್ಷೇತ್ರ ಅಭಿವೃದ್ಧಿಗೆ ಇದುವರೆಗೆ ವಿವಿಧ ಮೂಲಗಳಿಂದ ಹಾಗೂ ಮುಜರಾಯಿ ಇಲಾಖೆ ವತಿಯಿಂದ ರೂ. 1 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ.

ಇಲ್ಲಿನ ಕೆರೆಯಲ್ಲಿ ಜಲ ಕ್ರೀಡೆ, ಸಾಹಸ ಪ್ರದರ್ಶನಕ್ಕೆ ವಿಫುಲ ಅವಕಾಶಗಳಿವೆ. ರ್ಯಾಪ್ಟಿಂಗ್‍ಗೆ ಅನುಕೂಲವಾಗುವ ದೃಷ್ಟಿಯಲ್ಲಿ ಉತ್ತಮ ತಾಂತ್ರಿಕ ಹಾಗೂ ಗುಣಮಟ್ಟದ ಬೋಟ್‍ಗಳನ್ನು ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಇದರೊಂದಿಗೆ ಗವಿ ಬೆಟ್ಟಕ್ಕೆ, ಮೆಟ್ಟಿಲುಗಳ ನಿರ್ಮಾಣ, ಕೆರೆಯ ಸುತ್ತಲೂ ರೇಲಿಂಗ್ಸ್ ಅಳವಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದರು.

ಮಾಹಿತಿ ಹಕ್ಕು ಆಯೋಗದ ಮಾಜಿ ಅಧ್ಯಕ್ಷ ವಿರೂಪಾಕ್ಷಯ್ಯ ಮಾತನಾಡಿ, ಸಣ್ಣ ನಿರಾವರಿ ಇಲಾಖೆಯಿಂದಲೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ಬಳಸಿಕೊಳ್ಳಬಹುದು. ಈ ಬಗ್ಗೆ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ಡಿ.ಜೆ. ಈರಪ್ಪ ವಹಿಸಿದ್ದರು. ವೇದಿಕೆಯಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯೆ ಕುಸುಮ ಅಶ್ವಥ್, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಳಿಮಳ್ತೆ ದಿವಾಕರ್, ದೇವಾಲಯ ಸಮಿತಿ ಅಧ್ಯಕ್ಷ ಡಿ.ಜೆ. ಈರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.