ಮಡಿಕೇರಿ, ಮೇ 22: ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಸೇರ್ಪಡೆ ಮಾಡುವಂತಾಗಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ಶಾಲೆ ಕಡೆ ನಮ್ಮ ನಡೆ’ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಅಂಕಿ ಅಂಶದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ತೀರ ಕಡಿಮೆ ಇದೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿ ಅಂಶಗಳಲ್ಲಿ 11 ರಿಂದ 14 ವರ್ಷದೊಳಗಿನ 290 ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹಾಗೆಯೇ 14 ರಿಂದ 18 ವರ್ಷದೊಳಗಿನ 1,000 ಹೆಣ್ಣು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಇದೆ. ಆದ್ದರಿಂದ ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಐಟಿಡಿಪಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಸೇರ್ಪಡೆ ಮಾಡುವಂತಾಗಲು ಅಗತ್ಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಜಯರಾಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರಾಜು ಮತ್ತಿತರರು ಸಭೆಯಲ್ಲಿ ಹಾಜರಿದ್ದು ಹಲವು ಮಾಹಿತಿ ನೀಡಿದರು.