ಸೋಮವಾರಪೇಟೆ, ಡಿ. 10: ಅಂತರ್ಜಾತೀಯ ವಿವಾಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡಿದರೆ ಸಮಾಜದಲ್ಲಿ ಸಮಾನತೆಯನ್ನು ಕಾಪಾಡಲು ಸಾಧ್ಯವಿದೆ ಎಂದು ಇಲ್ಲಿನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ಯಾಂಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕು ಕಚೇರಿ ಸಭಾಂಗಣ ದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಆಯೋಜಿಸ ಲಾಗಿದ್ದ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಐಕ್ಯತೆ ಮತ್ತು ಒಗ್ಗಟ್ಟನ್ನು ಕಾಪಾಡುವ ಉದ್ದೇಶದಿಂದ ಮತ್ತು ಸರ್ವರಲ್ಲಿಯೂ ಸಮಾನತೆಯನ್ನು ಕಾಣಬೇಕಾದರೆ ಜಾತಿ ಪದ್ಧತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವತ್ತ ಎಲ್ಲರೂ ಗಮನಹರಿಸ ಬೇಕು. ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವದರೊಂದಿಗೆ ಲಂಚ ಪಡೆದು ಕೆಲಸ ಮಾಡಿ ಕೊಡುವವರ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಉಪನ್ಯಾಸಕರಾಗಿ ಪಾಲ್ಗೊಂಡಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಮಾನವನ ಮನಸ್ಸಿಗೆ ಧಕ್ಕೆಯಾಗುವಂತಹ ಅಥವಾ ಘಾಸಿಗೊಳಿಸತಕ್ಕಂತಹ ಕೃತ್ಯಗಳು ಮಾನವ ಹಕ್ಕುಗಳ ಉಲ್ಲಂಘನೆ ಯಾಗುತ್ತದೆ. ಮಾನವೀಯ ಮೌಲ್ಯಗಳನ್ನು ರಕ್ಷಿಸುವದರೊಂದಿಗೆ ಮಾನವ ಹಕ್ಕುಗಳು ಉಲ್ಲಂಘನೆ ಆಗದಂತೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಮಾನವ ಹಕ್ಕುಗಳಿಗೆ ಸವಾಲಾಗಿರುವ ಬಡತನವನ್ನು ನಿರ್ಮೂಲನೆ ಮಾಡಬೇಕು. ಜಾತಿ-ಜಾತಿಗಳು, ವರ್ಗ-ವರ್ಗಗಳ ನಡುವೆ ಸಂಘರ್ಷ, ಬಡವ- ಶ್ರೀಮಂತ ಎಂಬ ಭೇದಭಾವ, ಗಂಡು -ಹೆಣ್ಣು ಎಂಬ ಲಿಂಗ ತಾರತಮ್ಯ ಸಮಾಜ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ವಿಷಾದಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸಂವಿಧಾನದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಹಕ್ಕುಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಪ್ರಕರಣಗಳನ್ನು ತಡೆಯಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸಂಘಟಿತರಾಗಿ ಸಬಲರಾಗುತ್ತಿದ್ದರೂ ತಮ್ಮ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿರುವದು ದುರದೃಷ್ಟಕರ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಕೃಷ್ಣ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ಉಪಸ್ಥಿತರಿದ್ದರು. ಇದೇ ಸಂದರ್ಭ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ನಿರಂತರ ವಾಗಿ ಶ್ರಮಿಸುತ್ತೇವೆ ಎಂದು ಪ್ರಮಾಣ ವಚನವನ್ನು ಸ್ವೀಕರಿಸಲಾಯಿತು.