ಮಡಿಕೇರಿ, ಸೆ. 2: ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸು ವಂತಾಗಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ ಸಲಹೆ ಮಾಡಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾನೂನು ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಅಪೌಷ್ಟಿಕತೆ ಸಂಪೂರ್ಣವಾಗಿ ನಿವಾರಣೆ ಯಾಗಬೇಕಿದೆ. ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಮಾರ್ಗದರ್ಶನದ ಜಾಗೃತಿ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವಲ್ಲಿ ಸಾಮಾಜಿಕ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ 5 ವರ್ಷದೊಳಗಿನ 153 ಮಕ್ಕಳು ಅಪೌಷ್ಟಿಕತೆಗೆ ತುತ್ತಾಗಿದ್ದು, ಇವರಿಗೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುವಂತಾಗಲು ಕಾಳಜಿ ವಹಿಸಬೇಕಿದೆ. ಈ ದಿಸೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕು ಎಂದು ಹೇಳಿದರು. ಆರ್‍ಸಿಎಚ್ ಅಧಿಕಾರಿ ಡಾ. ದೇವಿ ಆನಂದ್ ಮಾತನಾಡಿ, ಅಪೌಷ್ಟಿಕತೆ ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ಮಕ್ಕಳಿಗೆ ಕಡ್ಡಾಯವಾಗಿ ಪೌಷ್ಟಿಕ ಆಹಾರ ಒದಗಿಸಲು ಮುಂದಾಗ ಬೇಕು. ಸಮತೋಲನ ಆಹಾರ ಅತೀ ಮುಖ್ಯ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಾಗರಾಜು ಮಾತನಾಡಿ, ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ. ಆರೋಗ್ಯ ಸಂಬಂಧ ಹೆಚ್ಚಿನ ಜಾಗೃತಿ ವಹಿಸುವದು ಅತ್ಯಗತ್ಯವಾಗಿದೆ ಎಂದು ಸಲಹೆ ಮಾಡಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಇತರರು ಇದ್ದರು. ಇದೇ ಸಂದರ್ಭ ಅಂಗನವಾಡಿ ಮಕ್ಕಳಿಗೆ ಕೆನೆ ಸಹಿತ ಹಾಲಿನ ಪುಡಿಯ ಪೊಟ್ಟಣ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಮತ್ತಿತರರು ಪಾಲ್ಗೊಂಡಿದ್ದರು.