ಸೋಮವಾರಪೇಟೆ, ಅ. 4: ಪ್ರತಿಯೊಂದು ಗ್ರಾಮದಲ್ಲೂ ಕೃಷಿ ಆಸಕ್ತಿಯುಳ್ಳ ರೈತರನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲಪಿಸುವ ವ್ಯವಸ್ಥೆಯನ್ನು ಕೃಷಿ ಇಲಾಖೆ ಕೈಗೊಂಡರೆ ಮಾತ್ರ ಕೃಷಿ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.

ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಕಸಬಾ ಹೋಬಳಿ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಕೃಷಿಯಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದರು. ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್. ಶ್ರೀನಿವಾಸ್ ಮಾತನಾಡಿ, ಕೃಷಿ ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ನೇರ ಸಂಪರ್ಕವನ್ನು ಹೊಂದಿರಬೇಕು. ಅಧಿಕಾರಿಗಳು ಸಮರ್ಪಕವಾದ ಮಾಹಿತಿಯನ್ನು ನೀಡಿದರೆ ಮಾತ್ರ ಸರ್ಕಾರದ ಎಲ್ಲಾ ಯೋಜನೆಗಳು ರೈತರ ಮನೆ ಬಾಗಿಲಿಗೆ ತಲಪಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ಮಾತನಾಡಿ, ಇಂದು ಜಿಲ್ಲೆಯ ಬಹುತೇಕ ಗದ್ದೆಗಳು ನಿವೇಶನಗಳಾಗಿ ಪರಿವರ್ತನೆಯಾಗುತ್ತಿದೆ. ಹಲವಾರು ಕೃಷಿಕರು ಕೃಷಿ ಚಟುವಟಿಕೆಗಳಿಂದ ದೂರ ಉಳಿಯುತ್ತಿರುವದು ವಿಪರ್ಯಾಸ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿ, ಕೊಡಗಿನ ಜನರು ಕೃಷಿ ಭೂಮಿಯನ್ನು ನಂಬಿ ಬದುಕನ್ನು ಕಂಡುಕೊಂಡವರು. ಗ್ರಾಮೀಣ ಭಾಗದ ಜನರು ಭೂಮಿಯನ್ನು ಪಾಳು ಬಿಡದೆ ಭತ್ತ ಸೇರಿದಂತೆ ಉಪ ಬೆಳೆಯನ್ನು ಬೆಳೆಸುವತ್ತ ಮುಂದಾಗಬೇಕು. ಭತ್ತದ ಕೃಷಿಯನ್ನು ಕೈ ಬಿಟ್ಟಿರುವ ರೈತ ಇಂದು ಹೊರ ಜಿಲ್ಲೆ ಅಥವಾ ಹೊರ ರಾಜ್ಯದಿಂದ ಅಕ್ಕಿಯನ್ನು ಖರೀದಿಸುವ ಪರಿಸ್ಥಿತಿ ಬಂದೊದಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಚ್.ಎಸ್. ರಾಜಶೇಖರ್ ಮಾತನಾಡಿ, ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದೊಂದಿಗೆ ಇಲಾಖೆ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ರೈತರು ಕೃಷಿ ಭೂಮಿಯ ಮಣ್ಣನ್ನು ಪರೀಕ್ಷೆ ಮಾಡಿಸಬೇಕು. ಮಣ್ಣಿನ ಆರೋಗ್ಯ ಸಮೃದ್ಧಿಯಾದರೆ ಮಾತ್ರ ಕೃಷಿ ಬೆಳೆಗಳಲ್ಲಿ ಅಧಿಕ ಇಳುವರಿ ಸಾಧ್ಯ ಎಂದರು. ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ವೀರೇಂದ್ರ ಕುಮಾರ್ ಮತ್ತು ಡಾ. ಪ್ರಭಾಕರ್ ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಪೂರ್ಣಿಮ ಗೋಪಾಲ್, ದೀಪಕ್, ತಾಲೂಕು ಪಂಚಾಯಿತಿ ಸದಸ್ಯರಾದ ಸಬಿತ, ತಂಗಮ್ಮ, ಸವಿತ ಈರಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ವಿಜಯಲಕ್ಷ್ಮೀ, ತಾಂತ್ರಿಕ ಅಧಿಕಾರಿ ಡಾ. ಎಸ್. ಮುಕುಂದ ಮತ್ತಿತರರು ಉಪಸ್ಥಿತರಿದ್ದರು.