ಮಡಿಕೇರಿ, ಜು. 21: ಉತ್ತರ ಪ್ರದೇಶ ಬಿಜೆಪಿಯ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ಅವರು ಬಹುಜನ ಸಮಾಜ ಪಕ್ಷದ ರಾಷ್ಟ್ರಾಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಮಾಯಾವತಿ ಅವರನ್ನು ಕುರಿತು ಅವಹೇಳನಕಾರಿ ಹಾಗೂ ಅಸಾಂವಿಧಾನಿಕ ಪದ ಬಳಕೆ ಮಾಡಿ ಮಾತನಾಡಿದ್ದಾರೆ. ಇದು ಭಾರತೀಯ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ ಎಂದು ಆರೋಪಿಸಿ ಘಟನೆಯ ಸೂಕ್ಷ್ಮತೆಯನ್ನು ಅರಿತು ದಯಾಶಂಕರ್ ಸಿಂಗ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಬಿ.ಎಸ್.ಪಿ.ಯಿಂದ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಲಾಯಿತು.
ದಯಾಶಂಕರ್ ಸಿಂಗ್ ಅವರ ಪ್ರತಿಕೃತಿಯನ್ನು ದಹಿಸಿ ನಗರದ ಜ. ತಿಮ್ಮಯ್ಯ ವೃತ್ತದಲ್ಲಿ 10 ನಿಮಿಷಗಳ ಕಾಲ ರಸ್ತೆ ತಡೆ ನಡೆಸಿ ರಾಷ್ಟ್ರಪತಿಗಳು ಗುಜರಾತ್ನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಬೇಕೆಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕವು ಆಗ್ರಹಿಸಿದೆ.
ಪ್ರತಿಭಟನೆಯ ನೇತೃತ್ವವನ್ನು ಬಿ.ಎಸ್.ಪಿ. ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಪ್ರೇಂಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಇ. ಮಹಮ್ಮದ್ ಕುಂಞ ವಹಿಸಿದ್ದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.