ಮಡಿಕೇರಿ, ನ. 17: ಕಾವ್ಯ ಮತ್ತು ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹಾನ್ ಸಂತಕವಿ, ದಾರ್ಶನಿಕರಾದ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ, ಮತ, ಧರ್ಮ ಎಂಬದನ್ನು ಮೀರಿ ಬೆಳೆದ ಸಂತ ಕವಿ, ಕೀರ್ತನೆಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಲು ಪ್ರಯತ್ನಿಸಿದರು ಎಂದು ಅವರು ತಿಳಿಸಿದರು. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ದಾಸಶ್ರೇಷ್ಠ ಕನಕದಾಸರ ಕೀರ್ತನೆಗಳನ್ನು ಅಳವಡಿಸಿ ಕೊಂಡರೆ ಸಮ ಸಮಾಜವನ್ನು ಕಾಣಬಹು ದಾಗಿದೆ. ಆ ನಿಟ್ಟಿನಲ್ಲಿ ಕನಕದಾಸರ ಕೀರ್ತನೆಗಳನ್ನು ಅಧ್ಯಯನ ಮಾಡುವಂತಾಗಬೇಕು.

ಬಸವಣ್ಣ 12ನೇ ಶತಮಾನದಲ್ಲಿ ಕಾಯಕವೇ ಕೈಲಾಸವೆಂದು ಸಾರಿದರು ಎಂದು ವಿವರಿಸಿದರು. ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ, ರಾಜ್ಯದಲ್ಲಿ ಹರಿದಾಸ ಪರಂಪರೆಗೆ ಸುಮಾರು ಐದುನೂರು ವರ್ಷಗಳ ಇತಿಹಾಸವಿದೆ. ಕನಕದಾಸರು ಹಾಗೂ ಪುರಂದರ ದಾಸರಂಥ ವೈಚಾರಿಕ ಸಂತರಿಂದಾಗಿ ಸಮಾಜದಲ್ಲಿನ ಅಸಮಾನತೆ ಭಾವನೆಗಳು ಕಡಿಮೆಯಾದವು ಎಂದು ತಿಳಿಸಿದರು.