ಸೋಮವಾರಪೇಟೆ, ಆ. 26: ಕರ್ನಾಟಕ ಕಾವಲು ಪಡೆ ವತಿಯಿಂದ ಕೊಡಗು ಜಿಲ್ಲೆಯ 60 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲು ತೀರ್ಮಾನಿಸಲಾಗಿದ್ದು, ತಾ. 28ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕನ್ನಡ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಗಣ್ಯರು ಪುರಸ್ಕರಿಸಲಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಕೃಷ್ಣ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾವಲು ಪಡೆ ವತಿಯಿಂದ ಪ್ರತಿವರ್ಷ ಕನ್ನಡ ಜಾಗೃತಿ ಸಮಾವೇಶ ನಡೆಸಲಾಗುತ್ತಿದ್ದು, ಕನ್ನಡ ನಾಡು, ನುಡಿ, ಸಾಹಿತ್ಯ ಸೇರಿದಂತೆ ಇತರ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸುತ್ತಾ ಬರಲಾಗುತ್ತಿದೆ. ಕಳೆದ ಕೆಲ ವರ್ಷಗಳಿಂದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಪ್ರಸಕ್ತ ವರ್ಷ ಕೊಡಗು ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತರಗತಿಯ ಕನ್ನಡ ಭಾಷಾ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕಗಳನ್ನು ಪಡೆದಿರುವ 60 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಮೈಸೂರಿನ ಕಲಾ ಮಂದಿರದಲ್ಲಿ ತಾ. 28ರಂದು ನಡೆಯುವ ಕಾರ್ಯಕ್ರಮದಲ್ಲಿ ಇವರನ್ನು ಅಭಿನಂದಿಸಲಾಗುವದು ಎಂದು ಮಾಹಿತಿ ನೀಡಿದರು.
ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗುತ್ತಿರುವ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಜ್ಞೆ ಜಾಗೃತಗೊಳಿಸಲು, ಕನ್ನಡ ನಾಡು, ನುಡಿ ಬಗ್ಗೆ ಅಭಿಮಾನ ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಅಂದು ಬೆಳಿಗ್ಗೆ 10 ಗಂಟೆಯ ಒಳಗೆ ಕಲಾಮಂದಿರದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗೆ ಮೊ: 9449699776 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಮೈಸೂರು ಶಾಖಾ ಮುಖ್ಯಸ್ಥ ಶ್ರೀಸೋಮೇಶ್ವರನಾಥ ಸ್ವಾಮೀಜಿ, ರಾಜ್ಯ ಪೊಲೀಸ್ ಅಕಾಡೆಮಿ ನಿರ್ದೇಶಕಿ ಡಾ. ಧರಣಿ ದೇವಿ ಮಾಲಗತ್ತಿ, ಶಾಸಕ ಜಿ.ಟಿ. ದೇವೇಗೌಡ, ಕಾವಲು ಪಡೆಯ ರಾಜ್ಯಾಧ್ಯಕ್ಷ ಮೋಹನ್‍ಕುಮಾರ್ ಗೌಡ, ಮಹಿಳಾ ಹೋರಾಟಗಾರ್ತಿ ಸುನಂದ ಜಯರಾಂ, ಕಸಾಪ ಅಧ್ಯಕ್ಷ ಮುದ್ದೇಗೌಡ, ಜಯದೇವ ಆಸ್ಪತ್ರೆಯ ಮುಖ್ಯಸ್ಥ ಕೆ. ಸದಾನಂದ್, ವಿಶ್ರಾಂತ ಕುಲಪತಿ ಜೆ. ಶಶಿಧರ್ ಪ್ರಸಾದ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಹೆಚ್.ಹೆಚ್. ಕುಮಾರ್, ತಾಲೂಕು ಅಧ್ಯಕ್ಷ ಅರುಣ್‍ಪೂಜಾರಿ, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಸುಕ್ಕೂರ್ ಅವರುಗಳು ಉಪಸ್ಥಿತರಿದ್ದರು.