ಕುಶಾಲನಗರ, ನ. 16: 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಬಳಕೆಯ ಬಗ್ಗೆ ಕೀಳರಿಮೆ ಸಲ್ಲದು ಎಂದು ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಗೌರವಾಧ್ಯಕ್ಷ ವಿ.ಎನ್. ವಸಂತಕುಮಾರ್ ಹೇಳಿದರು.ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶುದ್ಧ ಕನ್ನಡ ಅಶುಭಾಷಣ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಸಾರುವ ಭಾರತ ದೇಶದಲ್ಲಿ ಹಲವಾರು ಭಾಷೆಗಳು ತನ್ನದೇ ಆದ ಪ್ರೌಢಿಮೆಯನ್ನು ಹೊಂದಿದೆ. ಕರ್ನಾಟಕ ರಾಜ್ಯದಲ್ಲಿ ನೂರಾರು ಭಾಷೆಗಳ ನಡುವೆ ಕನ್ನಡದ ಛಾಪು ಮರೆಯಾಗುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಆಂಗ್ಲ ಭಾಷಾ ವ್ಯಾಮೋಹಕ್ಕೆ ಬಲಿಯಾಗದೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಿಂತನೆ ಹರಿಸಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಪನ್ಯಾಸಕ ಸಬಲಂ ಭೋಜಣ್ಣ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಕನ್ನಡ ಬರವಣಿಗೆಯಲ್ಲಿ ಪರಿಶುದ್ಧತೆ ಕಾಪಾಡಿಕೊಳ್ಳುವದರೊಂದಿಗೆ ಕನ್ನಡದಲ್ಲಿ ಸಹಿ ಹಾಕುವ ಮೂಲಕ ಕನ್ನಡದ ಉಳಿವಿಗೆ ಪ್ರಯತ್ನಿಸಬೇಕಿದೆ ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕಸಾಪ ಹೋಬಳಿ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ, ತಾಲೂಕು ಅಧ್ಯಕ್ಷ ಹೆಚ್.ಹೆಚ್.ಸುಂದರ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಕಾಲೇಜು ಪ್ರಾಂಶುಪಾಲ ಸತೀಶ್ ಬಾಬು, ಕಸಾಪ ಪದಾಧಿಕಾರಿಗಳಾದ ಕೆ.ಕೆ.ನಾಗರಾಜಶೆಟ್ಟಿ, ಈಶ, ರತ್ನಾಕರ ಪಾಲ್ಗೊಂಡಿದ್ದರು. ಹೋಬಳಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.