ಮಡಿಕೇರಿ, ಆ. 5: ಬೆಲೆ ಏರಿಕೆಯನ್ನು ನಿಯಂತ್ರಣಗೊಳಿಸುವಲ್ಲಿ ವಿಫಲವಾಗಿರುವದು ಸೇರಿದಂತೆ ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.ದಿನ ಬಳಕೆ ಅಗತ್ಯ ಸಾಮಗ್ರಿಗಳ ಬೆಲೆ ಇಳಿಸಬೇಕು, ದಲಿತರ, ಆದಿವಾಸಿಗಳ, ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ, ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ಮೇಲೆ ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವ ಸಂಪುಟದಲ್ಲಿರುವ 13ಕ್ಕೂ ಹೆಚ್ಚು ಸಚಿವರುಗಳ ಮೇಲೆ ಕ್ರಿಮಿನಲ್ ಆರೋಪವಿದ್ದು, ಅವರುಗಳನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ ಪ್ರತಿಭನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ಚಂದ್ರಮೌಳಿ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಎಂ. ಗಣೇಶ್, ಸೋಮವಾರಪೇಟೆ ಅಧ್ಯಕ್ಷ ಕೆ.ಎಂ. ಲೋಕೇಶ್, ಅರುಣ್ ಮಾಚಯ್ಯ ಸೇರಿದಂತೆ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.