ಸೋಮವಾರಪೇಟೆ, ಸೆ. 27: ಅಕ್ಟೋಬರ್ 18 ರಂದು ಕೊಡ್ಲಿಪೇಟೆಯಲ್ಲಿ ವೀರಶೈವ ಸಮಾವೇಶ ಮತ್ತು ಕ್ರೀಡಾಕೂಟ ಹಮ್ಮಿಕೊಳ್ಳುವ ಬಗ್ಗೆ ಪೂರ್ವ ಸಿದ್ದತಾ ಸಭೆ ಕೊಡ್ಲಿಪೇಟೆಯ ಕಿರಿಕೊಡ್ಲಿ ಶಾಲಾ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾ ಸಭಾದ ಅಧ್ಯಕ್ಷ ಡಿ.ಬಿ. ಧರ್ಮಪ್ಪ ಅವರು, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವೀರಶೈವ ಮುಖಂಡರುಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಂದು 10.30ಕ್ಕೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ, ಮಾಜಿ ಶಾಸಕ ಬಿ.ಬಿ. ಶಿವಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ವೀರಶೈವ ಮಹಾಸಭಾದ ಅಧ್ಯಕ್ಷ ತಿಪ್ಪಣ್ಣ, ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ, ವಕೀಲರಾದ ಚಂದ್ರಮೌಳಿ, ಮಹಾಸಭಾದ ಉಪಾಧ್ಯಕ್ಷ ನಾಗರಾಜಯ್ಯ, ಕಾರ್ಯದರ್ಶಿ ವಾಗೀಶ್ ಪ್ರಸಾದ್ ಸೇರಿದಂತೆ ಹಲವು ವೀರಶೈವ ಪ್ರಮುಖರು, ಜಿಲ್ಲೆಯ ಎಲ್ಲಾ ಮಠಾಧಿಪತಿಗಳು ಭಾಗವಹಿಸ ಲಿದ್ದಾರೆ ಎಂದರು.
ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜು ಮಾತನಾಡಿ, ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಜಯಗಳಿಸಿದ ಜನಾಂಗದ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಗುವದು. 2015-16ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಅಧಿಕ ಅಂಕಗಳಿಸಿದ ವೀರಶೈವ ವಿದ್ಯಾರ್ಥಿಗಳಿಗೆ ಪ್ರತಿಭಾ ಪರಸ್ಕಾರ ನೀಡಿ ಗೌರವಿಸಲಾಗುವದು. ವಿದ್ಯಾರ್ಥಿಗಳು ತಾ. 30 ರೊಳಗೆ ಅಂಕಪಟ್ಟಿ ನಕಲಿನೊಂದಿಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.
ಕ್ರೀಡಾ ಸಮಿತಿಯ ಅಧ್ಯಕ್ಷ ಎಸ್. ಮಹೇಶ್ ಮಾತನಾಡಿ, ಜಿಲ್ಲೆಯ ವೀರಶೈವ ಯುವಕರನ್ನು ಹಾಗೂ ಸಮಾಜ ಬಾಂಧವರಿಗೆ ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಲಾಗಿದೆ. ಅಕ್ಟೋಬರ್ 16 ರಂದು ಕೊಡ್ಲಿಪೇಟೆಯ ಕಲ್ಲುಮಠದ ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ವೀರಶೈವ ಕ್ರೀಡಾಕೂಟ ನಡೆಯಲಿದೆ.
ಅಂದು ಬೆಳಿಗ್ಗೆ 9.30ಕ್ಕೆ ಆರಂಭಗೊಳ್ಳಲಿದೆ. ಎಲ್.ಕೆ.ಜಿ. ಯಿಂದ ವಯೋವೃದ್ಧರವರೆಗೆ, ಬಾಲಕ, ಬಾಲಕಿಯರು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಂದೇ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವದು ಎಂದು ಮಾಹಿತಿ ನೀಡಿದರು.
ವೀರಶೈವ ಮಹಾ ಸಭಾದ ರಾಜ್ಯ ಸಮಿತಿ ಸದಸ್ಯ ನಂಜುಂಡ ಸ್ವಾಮಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಈ ಬಗ್ಗೆ ಚರ್ಚೆ ನಡೆದು ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.
ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಹಾಗೂ ಕಲ್ಲುಮಠದ ಮಹಾಂತ ಸ್ವಾಮೀಜಿ, ವೀರಶೈವ ಮಹಾಸಭಾದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಿ.ವಿ. ವಿಶ್ವನಾಥ್, ವೀರಾಜಪೇಟೆ ಉಪಾಧ್ಯಕ್ಷ ಸುರೇಶ್, ಜಿಲ್ಲಾ ಉಪಾಧ್ಯಕ್ಷೆ ಸಾವಿತ್ರಮ್ಮ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ತೇಜಸ್ವಿ ಸೇರಿದಂತೆ ಜಿಲ್ಲೆಯ ವಿವಿಧ ಪದಾಧಿಕಾರಿಗಳು ಪಾಲ್ಗೊಂಡಿದ್ದರು.