ಮಡಿಕೇರಿ, ಆ. 11: ಜಂತುಹುಳು ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ದೈಹಿಕ ಬೆಳವಣಿಗೆ ಕುಂಠಿತ ವಾಗುವದರಿಂದ ಜಂತು ಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸುವದು ಅತ್ಯಗತ್ಯ ವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಸಲಹೆ ಮಾಡಿದ್ದಾರೆ.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರೂ ಆರೋಗ್ಯಯುತವಾಗಿದ್ದಲ್ಲಿ ಸದೃಢ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಜಂತುಹುಳು ದೇಹಕ್ಕೆ ಪ್ರವೇಶ ಮಾಡುವದರಿಂದ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳ ಜೊತೆಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಮಕ್ಕಳು ಆರೋಗ್ಯ ಯುತರಾಗಿದ್ದಲ್ಲಿ ಪಾಠ ಪ್ರವಚನ, ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ಆದ್ದರಿಂದ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಅಧಿಕಾರಿ ಡಾ. ದೇವಿಆನಂದ್ ಮಾತನಾಡಿ, ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಲ್ಲಿ ನೀಡಲಾಗುತ್ತದೆ. ಶಾಲೆಯಿಂದ ಹೊರಗಿರುವವರಿಗೆ ಅಂಗನವಾಡಿ ಮೂಲಕ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ 10 ರಲ್ಲಿ 7 ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಜಂತುಹುಳು ಕಾರಣವಾಗಿದೆ. ಆದ್ದರಿಂದ ಜಂತುಹುಳು ನಿವಾರಣೆ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಅವರು ಜಂತುಹುಳು ನಿವಾರಣೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕುಟುಂಬದವರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಹೇಳಿದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ, ಡಾ. ಆಶಾ, ಬಿ. ಸಿದ್ದರಾಜು, ಸ್ವಾಮಿ, ಕಿರಣ್ ಕುಮಾರ್, ದಯಾನಂದ, ಮತ್ತಿತರರು ಇದ್ದರು.