ಸೋಮವಾರಪೇಟೆ, ಜೂ. 19: ತಾಲೂಕಿನ ಪ್ರವಾಸಿ ತಾಣವಾದ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶದ ಮಲ್ಲಳ್ಳಿ ಜಲಪಾತಕ್ಕೆ ತೆರಳಲು ಸರ್ಕಾರದಿಂದ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಪರಿಶೀಲಿಸಿದರು.
ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಮಾಹಿತಿ, ಪ್ರಸ್ತುತ ಕೈಗೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿವರ ಪಡೆದ ಜಿಲ್ಲಾಧಿಕಾರಿಗಳು, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು.
ಕೆಲವು ಕಡೆಗಳಲ್ಲಿ ಲೋಕೋಪಯೋಗಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಉದ್ದೇಶಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಹೆಚ್ಚುವರಿ ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದರೆ ಇಲಾಖೆಯಿಂದ ವರದಿ ತಯಾರಿಸುವಂತೆ ಸೂಚಿಸಿದರು.