ಸೋಮವಾರಪೇಟೆ, ಜ. 10: ತಾ. 12 ರಂದು ನಡೆಯುವ ಸೋಮವಾರಪೇಟೆ ತಾಲೂಕು ಕುಶಾಲನಗರ ಎಪಿಎಂಸಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ರಾಜ್ಯ ರೈತ ಸಂಘ ಬೆಂಬಲ ನೀಡಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಐ.ಪಿ. ಭವೇರಪ್ಪ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರೈತಪರ ಕಾಳಜಿ ಹೊಂದಿರುವ ಪಕ್ಷವಾಗಿರುವದರಿಂದ, ಎಪಿಎಂಸಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿ, ಅಧಿಕಾರದ ಗದ್ದುಗೆ ಹಿಡಿದರೆ, ರೈತರಿಗೆ ಉಪಯೋಗ ವಾಗಬಹುದು ಎಂಬ ಸದುದ್ದೇಶ ದಿಂದ ಬೆಂಬಲ ವ್ಯಕ್ತಪಡಿಸಲಾಗಿದೆ ಎಂದು ಹೇಳಿದರು.

ಎಪಿಎಂಸಿ ಚುನಾವಣೆಯ ಹಾನಗಲ್ಲು ಕ್ಷೇತ್ರದ ಅಭ್ಯರ್ಥಿ ಸಿ.ಎಸ್. ನಾಗರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನಸ್ಸು ಮಾಡಿದರೆ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬಹುದು.

ಜೆಡಿಎಸ್ ನೇತೃತ್ವದ ಸರ್ಕಾರ ಬಂದರೆ 24 ಗಂಟೆಯೊಳಗೆ ರಾಜ್ಯದ ರೈತರ ಸಾಲ ಮನ್ನಾ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇಂತಹ ಕಾರ್ಯವನ್ನು ಕಾಂಗ್ರೆಸ್ ಹಾಗೂ ಬಿಜೆಪಿಗೆ ಮಾಡಲು ಸಾಧ್ಯವಾಗುತ್ತಿಲ್ಲವೇಕೆ? ಎಂದು ಪ್ರಶ್ನಿಸಿದರು.

ರೈತ ಸಂಘದ ಹೋರಾಟದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ರೈತರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಮಾರುಕಟ್ಟೆ ವ್ಯವಸ್ಥೆಯಲ್ಲಿ ರೈತರಿಗೆ ಸಿಗಬೇಕಾದ ಸೌಲಭ್ಯಗಳು ದೊರಕಿಸಿ ಕೊಡುವತ್ತ ಕಾಳಜಿ ವಹಿಸಲಾಗುವದು ಎಂದು ಹೇಳಿದರು.

ಗೋಷ್ಠಿಯಲ್ಲಿ ಜೆಡಿಎಸ್ ಪ್ರಮುಖರಾದ ಡಿ.ಎಸ್. ಚಂಗಪ್ಪ, ಲಿಂಗೇರಿ ಚಂದ್ರಪಾಲ್, ಡಿ.ಎಂ. ರಮೇಶ್ ಇದ್ದರು.