ಸೋಮವಾರಪೇಟೆ, ಜೂ. 30: ಆದಿವಾಸಿ ಜೇನು ಕುರುಬರ ಜನಾಂಗದ ಕಲೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಅಕ್ಟೋಬರ್ 12 ರಂದು ಕುಶಾಲನಗರ ರೈತ ಸಂಪರ್ಕ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಜೇನು ಕುರುಬ ಜನಾಂಗ ಸಮಾವೇಶದ ಪೂರ್ವಭಾವಿ ಸಭೆ ತಹಶೀಲ್ದಾರ್ ಬಿ.ಸಿ. ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.

ಆದಿವಾಸಿ ಗಿರಿಜನರ ಶ್ರೀಮಂತ ಕಲೆ, ಸಂಸ್ಕøತಿಯನ್ನು ಪರಿಚಯಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾವೇಶವನ್ನು ಆಯೋಜಿಸಿದೆ. ಗಿರಿಜನರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ತೋರ್ಪಡಿಸುವ ಸದಾವಕಾಶವನ್ನು ಪ್ರತಿಭಾವಂತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹೇಳಿದರು.

ಅಂದು ಬೆಳಿಗ್ಗೆ 10 ಗಂಟೆಗೆ ಕಾವೇರಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಿರಿಜನರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಶೋಧಕರು ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜನಾಂಗದ ಐದು ಮಂದಿಯನ್ನು ಸನ್ಮಾನಿಸಲು ಸಭೆ ತೀರ್ಮಾನಿಸಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.

ಸಭೆಯಲ್ಲಿ ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಜೆ.ಪಿ. ರಾಜು, ಬಸವನಹಳ್ಳಿ ಲ್ಯಾಂಪ್ ಸೊಸೈಟಿ ಅಧ್ಯಕ್ಷ ರಾಜಾರಾವ್, ತಾಲೂಕು ಅಧ್ಯಕ್ಷ ಆರ್.ಕೆ. ಚಂದ್ರು, ವಳಗುಂದ ಹಾಡಿಯ ಸೋಮಕ್ಕ, ಪ್ರಮುಖರಾದ ರವಿ, ಪ್ರಕಾಶ್, ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.