ಸೋಮವಾರಪೇಟೆ, ಜ. 7: ಡಿಜಿಟಲ್ ಇಂಡಿಯಾ ಯೋಜನೆಯಿಂದ ದೇಶದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಸಾಧ್ಯವೆಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಪಟ್ಟಣದ ಸಂತ ಜೋಸೆಫರ ಪ್ರೌಢಶಾಲೆಯ ಆವರಣದಲ್ಲಿ ಮೂಕಾಂಬಿಕ ಕಂಪ್ಯೂಟರ್ಸ್ ವತಿಯಿಂದ ಡಿಜಿಟಲ್ ಇಂಡಿಯಾ ಯೋಜನೆಯಡಿ ಉಚಿತ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದು, ಅದಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಇದರಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ದೇಶದ ಜನರಲ್ಲಿ ಕಂಪ್ಯೂಟರ್ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ ಅವರನ್ನು ಸಾಕ್ಷರರನ್ನಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಸಂತ ಜೋಸೆಫರ ವಿದ್ಯಾಸಂಸ್ಥೆಯ ಮುಖ್ಯಸ್ಥ ಫಾ. ರಾಯಪ್ಪ, ಪ್ರಾಂಶುಪಾಲ ಫಾ. ವಿನ್ಸೆಂಟ್ ಮೊಂತೆರೋ, ಮುಖ್ಯೋಪಾಧ್ಯಾಯ ಹ್ಯಾರಿ ಮೋರಸ್, ಮೂಕಾಂಬಿಕ ಕಂಪ್ಯೂಟರ್ಸ್‍ನ ಎಸ್.ಚಂದ್ರು, ವಿದ್ಯಾಸಂಸ್ಥೆಯ ಪ್ರಮುಖ ಲಾರೆನ್ಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂಕಾಂಬಿಕ ಕಂಪ್ಯೂಟರ್ಸ್‍ನ ಎಸ್.ಎಂ. ಧನುಷ್ ಡಿಜಿಟಲ್ ಇಂಡಿಯಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಂತ ಜೋಸೆಫರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು.