ಕೂಡಿಗೆ, ಆ. 25: ಕ್ರೀಡಾಕೂಟದ ಮೂಲಕ ಆರೋಗ್ಯಕರ ಬೆಳವಣಿಗೆಗೆ ಕ್ರೀಡೆಯು ಸಹಕಾರಿಯಾಗುವದು ಎಂದು ಕೊಡಗು ವಿದ್ಯಾ ಇಲಾಖೆಯ ನೌಕರರ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಮಂಜುನಾಥ್ ಅಭಿಪ್ರಾಯಪಟ್ಟರು.ಕಣಿವೆಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಶಿಕ್ಷಕರ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ಬಸವರಾಜ್ ಮಾತನಾಡಿ, ಶಿಕ್ಷಕರು ಕ್ರೀಡೆಯಲ್ಲಿ ಭಾಗವಹಿಸುವದರಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯಲು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.

ಈ ಸಂದರ್ಭ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಚೇತನ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಲತಾಮಣಿ ವಹಿಸಿದ್ದರು. ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಸೋಮಶೇಖರ್ ತಾಲೂಕು ಪ್ರಾಥಮಿಕ ಶಿಕ್ಷಕ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಪ್ರೌಢಾಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಧರ್ಮಪ್ಪ ತಾಲೂಕು ನೌಕರರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಕಣಿವೆ ಶಾಲೆಯ ಮುಖ್ಯೋಪಾಧ್ಯಾಯ ಗಣೇಶ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಕರುಂಬಯ್ಯ, ತಾಲೂಕು ಶಿಕ್ಷಕ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು. ಶಿಕ್ಷಕರಿಗೆ ಕಬಡ್ಡಿ, ಥ್ರೋಬಾಲ್, ಹಗ್ಗ ಜಗ್ಗಾಟ, ಹಾಡುಗಾರಿಕೆ ಸ್ಪರ್ಧೆಗಳು ನಡೆದವು. ಕ್ರೀಡಾಕೂಟಕ್ಕೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಾಶಾಲಾ ಶಿಕ್ಷಕರುಗಳು ಭಾಗವಹಿಸಿದ್ದರು.