ಕುಶಾಲನಗರ, ಜು. 21: ಕುಶಾಲನಗರ ಪಟ್ಟಣದ ಕೊಳಚೆ ಹಾಗೂ ತ್ಯಾಜ್ಯಗಳನ್ನು ಕಾವೇರಿ ನದಿಗೆ ನೇರವಾಗಿ ಹರಿಯದಂತೆ ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.
ಗುರುಪೂರ್ಣಿಮ ಅಂಗವಾಗಿ ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದ ಆರತಿ ಕ್ಷೇತ್ರದಲ್ಲಿ ನಡೆದ 55ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಟ್ಟಣದ ವಿವಿಧ ಬಡಾವಣೆಗಳಿಂದ ಹರಿಯುತ್ತಿರುವ ಕೊಳಚೆ ನೀರನ್ನು ಇಂಗುಗುಂಡಿ ನಿರ್ಮಿಸುವ ಮೂಲಕ ನದಿ ಸೇರುವದನ್ನು ತಪ್ಪಿಸಲಾಗುವದು. ಈ ಮೂಲಕ ನದಿ ನೀರಿನ ಸಂರಕ್ಷಣೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಆರತಿ ಅಂಗವಾಗಿ ಅಯ್ಯಪ್ಪಸ್ವಾಮಿ ದೇವಾಲಯದ ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ, ಅರ್ಚನೆ ನಡೆಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ನದಿ ಮಹಾ ಆರತಿ ಬೆಳಗಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್.ಚಂದ್ರಮೋಹನ್, ಅಯ್ಯಪ್ಪಸ್ವಾಮಿ ದೇವಾಲಯ ಟ್ರಸ್ಟ್ನ ವಿ.ಆರ್. ಶಿವಶಂಕರ್, ಸುಬ್ಬಯ್ಯ, ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಬಿ.ಜೆ.ಅಣ್ಣಯ್ಯ, ಕುಶಲ ಅರ್ಚಕರ ಸಂಘದ ಅಧ್ಯಕ್ಷ ಪರಮೇಶ್ವರ್ ಭಟ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕ ವನಿತಾ ಚಂದ್ರಮೋಹನ್, ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖರಾದ ಡಿ.ಆರ್.ಸೋಮಶೇಖರ್, ಜಗದೀಶ್, ಸ್ಥಳೀಯ ಮಹಿಳಾ ಭಜನಾ ಮಂಡಳಿ ಹಾಗೂ ಬಳಗದ ಸದಸ್ಯರು ಇದ್ದರು.