ಮಡಿಕೇರಿ, ಜು. 16: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಸೂಚನೆ ನೀಡಿದ್ದಾರೆ.
ನಗರದ ತಮ್ಮ ಕಚೇರಿ ಸಭಾಂಗಣ ದಲ್ಲಿ ನಡೆದ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಕಾರ್ಯಕ್ರಮಗಳನ್ನು ಮೀಸಲಿಟ್ಟಿದೆ. ಅವುಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಕಾಲದಲ್ಲಿ ಸೌಲಭ್ಯಗಳನ್ನು ತಲಪಿಸುವಂತಾಗ ಬೇಕು ಮತ್ತು ಅಧಿಕಾರಿಗಳಿಗೆ ಕೊಟ್ಟಿರುವ ಶೇಕಡವಾರು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಶಾಲಾ ಶೈಕ್ಷಣಿಕ ಸೌಲಭ್ಯ ಹೆಚ್ಚಿಸುವದು, ಸ್ವ ಉದ್ಯೋಗ ಕೈಗೊಳ್ಳಲು ಅನುವು ಮಾಡುವದು, ಗ್ರಾಮೀಣ ವಾಸ ಯೋಜನೆಯಲ್ಲಿ ಸಮಾನ ಪಾಲು ನೀಡುವದು, ಹೀಗೆ ವಿವಿಧ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಆಯಾಯ ವರ್ಷದಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತಾಗಬೇಕು. ವಿವಿಧ ಇಲಾಖೆಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿದ್ದು, ಇವುಗಳು ಹೆಚ್ಚು ಪ್ರಗತಿ ಸಾಧಿಸುವಂತಾಗಬೇಕು.
ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಅನುದಾನ ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ತಲಪಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಒದಗಿಸಬೇಕು. ಹಾಗೆಯೇ ಫಲಾನುಭವಿಗಳು ಇದ್ದಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಲ್ಪಸಂಖ್ಯಾತರು, ಹಿಂದುಳಿದವರು, ಪರಿಶಿಷ್ಟರ ಜನಸಂಖ್ಯೆಗೆ ಅನುಗುಣ ವಾಗಿ ಅನುದಾನವನ್ನು ಮೀಸಲಿಟ್ಟು, ಬಡ ಜನರ ಒಳಿತಿಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಬಿ.ಸಿ.ಎಂ. ಅಧಿಕಾರಿ ಕೆ.ವಿ. ಸುರೇಶ್ ಅವರು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಪ್ರಧಾನಮಂತ್ರಿ ಯವರ 15 ಅಂಶಗಳ ಯೋಜನೆ ಯಡಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಮನವಿ ಮಾಡಿದರು.
ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ, ಡಿ.ಡಿ.ಪಿ.ಐ. ಜಿ. ಬಸವರಾಜು, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ, ಮೀನುಗಾರಿಕೆ ಇಲಾಖೆ ಅಧಿಕಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯ ಹಲವು ಮಾಹಿತಿ ನೀಡಿದರು.