ಮಡಿಕೇರಿ, ನ. 25: ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 500 ಮಿಲಿ ಮೀಟರ್‍ನಷ್ಟು ಮಳೆ ಕಡಿಮೆಯಾಗಿದ್ದು, ತೀವ್ರ ಬರ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಜನರಿಗೆ ಕುಡಿಯುವ ನೀರು ಒದಗಿಸುವದು, ಜತೆಗೆ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯೇ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು, ಈ ಬಾರಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗಿ ರುವದರಿಂದ, ಇನ್ನಷ್ಟು ಮುನ್ನೆಚ್ಚರಿಕೆ ವಹಿಸುವದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸರ್ಕಾರ ಈಗಾಗಲೇ ಕುಡಿಯುವ ನೀರಿಗಾಗಿ ರೂ. 1 ಕೋಟಿ ಬಿಡುಗಡೆ ಮಾಡಿದ್ದು, ಅಗತ್ಯಕ್ಕೆ ತಕ್ಕಂತೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿಗೆ ನಿಗದಿಯಂತೆ ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ವೀರಾಜಪೇಟೆ ಮತ್ತು ಸೋಮವಾರಪೇಟೆಗೆ ಸಂಬಂಧಿಸಿ ದಂತೆ ಶಾಸಕರನ್ನು ಸಂಪರ್ಕಿಸಿ ಆದ್ಯತೆ ಮೇಲೆ ಕ್ರಿಯಾಯೋಜನೆ ಪಟ್ಟಿ ತಯಾರಿಸಿ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಾಲೂಕು ಮಟ್ಟದ ಪ್ರಕೃತಿ ವಿಕೋಪ ಪರಿಹಾರ ಸಮಿತಿಯಲ್ಲಿ ಮಂಜೂರಾತಿ ಪಡೆಯಲು ಜರೂರಾಗಿ ಕ್ರಮವಹಿಸ ಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲೆಯ ಮೂರು ತಾಲೂಕನ್ನು ಬರ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆ ಬರ ಪರಿಹಾರ ಕಾಮಗಾರಿ ನಿರ್ವಹಣೆಗೆ ಮೂರು ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವೀರಾಜಪೇಟೆ ತಾಲೂಕಿಗೆ ಉಪ ವಿಭಾಗಾಧಿಕಾರಿ, ಮಡಿಕೇರಿ ತಾಲೂಕಿಗೆ ಜಿ.ಪಂ. ಯೋಜನಾ ನಿರ್ದೇಶಕರು ಹಾಗೂ ಸೋಮವಾರ ಪೇಟೆ ತಾಲೂಕಿಗೆ ಜಿ.ಪಂ. ಉಪ ಕಾರ್ಯ ದರ್ಶಿಯವರನ್ನು ನಿಯೋಜಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬರ ಪರಿಹಾರ ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳಲು ಕಳೆದ ಬಾರಿಯಂತೆ ಪಂಚಾಯತ್ ವಾರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮವಹಿಸುವಂತೆ ಜಿ.ಪಂ. ಉಪ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದರು. ಪ್ರಸಕ್ತ ಸಾಲಿನಲ್ಲಿ ಬರ ಪರಿಹಾರ ಯೋಜನೆಯಡಿ ಮೊದಲ ಮತ್ತು ಎರಡನೇ ಹಂತದಲ್ಲಿ ಮಂಜೂರಾತಿ ನೀಡಿದ ಕುಡಿಯುವ ನೀರಿನ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ವೀರಾಜಪೇಟೆ ತಾಲೂಕಿಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ರೂ. 50 ಲಕ್ಷ ಅಂದಾಜಿನ 36 ಕಾಮಗಾರಿಗಳ ಪೈಕಿ 31 ಕಾಮಗಾರಿ ಪೂರ್ಣಗೊಂಡಿದ್ದು, ಸುಮಾರು ರೂ. 33.85 ಲಕ್ಷ ವೆಚ್ಚವಾಗಿದೆ ಎಂದು ಸಂಬಂಧಪಟ್ಟ ಇಂಜಿನಿಯರ್ ಮಾಹಿತಿ ನೀಡಿದರು. 2015-16ನೇ ಸಾಲಿನಲ್ಲಿ ಮಂಜೂರಾದ 5 ಕಾಮಗಾರಿಗಳನ್ನು ಪೂರ್ಣಗೊಳಿಸದಿರುವದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸಂಬಂಧಿಸಿದ ಕಾರ್ಯಪಾಲಕ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್‍ಗೆ ಕೂಡಲೇ ಕಾಮಗಾರಿ ಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚನೆ ನೀಡಿದರು.

2015-16ನೇ ಸಾಲಿನಲ್ಲಿ ಎರಡನೇ ಹಂತದ ಬರ ಪರಿಹಾರ ಯೋಜನೆಯಡಿ ರೂ. 50 ಲಕ್ಷ ಅನುದಾನವನ್ನು ಜಿಲ್ಲೆಗೆ ಹಂಚಿಕೆ ಮಾಡಲಾಗಿದ್ದು, 48 ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇವುಗಳಲ್ಲಿ 22 ಕಾಮಗಾರಿಗಳು ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಪೂರ್ಣ ಗೊಳಿಸುವಂತೆ ಅವರು ನಿರ್ದೇಶನ ನೀಡಿದರು. ರೈತರ ಆತ್ಮಹತ್ಯೆ ಸಂಬಂಧಿಸಿ ದಂತೆ 2015-16ರಲ್ಲಿ 7 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ನಾಲ್ಕು ಅರ್ಹ ಪ್ರಕರಣಗಳಿಗೆ ಸರ್ಕಾರದ ನಿರ್ದೇಶನದಂತೆ ತಲಾ ರೂ. 5 ಲಕ್ಷವನ್ನು ವಾರಿಸುದಾರರಿಗೆ ಪರಿಹಾರ ವಿತರಣೆ ಮಾಡಲಾಗಿದೆ. ಹಾಗೆಯೇ 2016-17ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ 6 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 3 ಪ್ರಕರಣಗಳಿಗೆ ತಲಾ ರೂ. 5 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಬೆಳೆ ನಷ್ಟ ಹೊಂದಿ ಆತ್ಮಹತ್ಯೆಗೆ ಮುಂದಾದ ಕುಟುಂಬಗಳಿಗೆ ಮಾಸಿಕ ಪಿಂಚಣಿ ದೊರೆಯು ವಂತಾಗಲು ಕೂಡಲೇ ತುರ್ತು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಉಳಿದ ಪ್ರಕರಣಗಳನ್ನು ಕೂಲಂಕಷವಾಗಿ ಪರಿಗಣಿಸಿ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳು ವಂತೆ ಪಶುಪಾಲನಾ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಉಂಟಾಗಿರುವದರಿಂದ ಸುಮಾರು 11,750 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಸುಮಾರು 9,202 ರೈತರಿಗೆ ಸಹಾಯಧನ ಪಾವತಿಸಲು ರೂ. 660.13 ಲಕ್ಷ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಜೊತೆಗೆ ಸರ್ಕಾರಕ್ಕೆ ಕಾಲ ಕಾಲಕ್ಕೆ ಅಗತ್ಯ ಮಾಹಿತಿ ಒದಗಿಸಬೇಕಿದೆ ಎಂದು ಸಲಹೆ ಮಾಡಿದರು. ತಹಶೀಲ್ದಾರರು, ತಾ.ಪಂ. ಇಓ.ಗಳು ಮತ್ತು ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಎಇಇ.ಗಳು ಬರ ನಿರ್ವಹಣೆ ಸಂಬಂಧ ಸಮನ್ವಯತೆ ಹಾಗೂ ತಂಡೋಪಾದಿಯಾಗಿ ಕಾರ್ಯ ನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಶಶಿಧರ, ಜಿ.ಪಂ. ಇಂಜಿನಿಯರ್ ರಾಜ್ ಕುಮಾರ್ ರೆಡ್ಡಿ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.