ಮಡಿಕೇರಿ, ಸೆ. 2: ಕನ್ನಡ ಸಾಹಿತ್ಯ ಪರಿಷತ್ನ ಮೂರ್ನಾಡು ಘಟಕದ ವತಿಯಿಂದ ಹೋಬಳಿ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎಸ್. ಬಿಮಲ್ ಹಾಗೂ ಬಿ.ಎ. ಸಿಂಧು ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಕತ್ತೂರು ಪ್ರೌಢಶಾಲೆಯ ಚೇತನ್ ಹಾಗೂ ಅರ್ಚನಾ ದ್ವಿತೀಯ, ಮೂರ್ನಾಡು ಪ್ರೌಢಶಾಲೆಯ ಪಿ.ಪಿ. ಪವನ್ ಹಾಗೂ ಬಿ.ಎಲ್. ಕವನ್ ತೃತೀಯ ಸ್ಥಾನ ಪಡೆದುಕೊಂಡರು. ರಸಪ್ರಶ್ನೆ ಸ್ಪರ್ಧೆಯಲ್ಲಿ ಹೋಬಳಿ ವ್ಯಾಪ್ತಿಯ 6 ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಜಿ.ಪಂ. ಸದಸ್ಯೆ ಕಲಾವತಿ ಪೂವಪ್ಪ ಹಾಗೂ ಸ್ಥಳೀಯ ಗ್ರಾ.ಪಂ. ಅಧ್ಯಕ್ಷೆ ಕಲ್ಲುಮುಟ್ಲು ಜಮುನಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಪಿ.ಪಿ. ಸುಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ, ಕಾರ್ಯದರ್ಶಿ ಪಿ.ಎಸ್. ರವಿಕೃಷ್ಣ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.