ಕುಶಾಲನಗರ, ಅ.9 : ಜಾತಿ ಸಂಘಟನೆಗಳ ಮೂಲಕ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಸದೃಢರನ್ನಾಗಿಸುವ ಕೆಲಸಗಳು ಆದಲ್ಲಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇರಳ ಸಮಾಜಂ ವತಿಯಿಂದ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಓಣಂ ಹಬ್ಬಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇರಳ ಸಮಾಜದ ಕಟ್ಟಡಕ್ಕೆ ಶಾಸಕರ ನಿಧಿಯಿಂದ 2 ಲಕ್ಷ ರೂ.ಗಳ ಸಹಾಯ ಧನ ನೀಡುವದಾಗಿ ಅವರು ಭರವಸೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮೂಲ ಸಂಸ್ಕøತಿಯನ್ನು ಬಿಂಬಿಸುವ ಹಬ್ಬಗಳ ಸಾಮೂಹಿಕ ಆಚರಣೆಗಳು ನಡೆದಲ್ಲಿ ಜನಾಂಗದಲ್ಲಿ ಒಗ್ಗಟ್ಟು ಮೂಡಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕುಶಾಲನಗರ ಪ.ಪಂ. ಅಧ್ಯಕ್ಷ ಎಂ.ಎಂ. ಚರಣ್ ಉಪಸ್ಥಿತರಿದ್ದು ಮಾತನಾಡಿದರು.
ಕೇರಳ ಸಮಾಜದ ಅಧ್ಯಕ್ಷ ಕೆ.ಆರ್. ಶಿವಾನಂದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಐ.ಡಿ. ರಾಯ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ವಿಜಯನ್, ಸಮಾಜದ ಉಪಾಧ್ಯಕ್ಷ ಕೆ. ರಾಜನ್ ಇದ್ದರು. ಕಾರ್ಯಕ್ರಮದಲ್ಲಿ ಹುತಾತ್ಮ ಸೈನಿಕರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಿಸಲಾಯಿತು. ಮಾಜಿ ಸೈನಿಕ ಶ್ರೀಧರನ್ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಓಣಂ ಕಾರ್ಯಕ್ರಮ ಅಂಗವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಅಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಮಹಿಳೆಯರು ಮತ್ತು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.