ಸೋಮವಾರಪೇಟೆ, ಅ. 25: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ ತಿಳಿಸಿದ್ದಾರೆ. ತಾಲೂಕಿನ ಹುಲುಸೆ ಹೆಬ್ಬಾಲೆ ಕ್ಲಸ್ಟರ್‍ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 12 ರಂದು ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ. ಈ ಸ್ಪರ್ಧೆಗೆ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಸರ್ಕಾರಿ, ಅನುದಾನ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಓರ್ವ ಶಿಕ್ಷಕರಿಗೆ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ.
ಶಿಕ್ಷಕರಿಗೆ ಗಾಯನ ಸ್ಪರ್ಧೆ, ಆಶುಭಾಷಣ,ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸ ಪ್ರಶ್ನೆ ಹಾಗೂ ಸಾಮಾನ್ಯ ಜ್ಞಾನ, ವಿಜ್ಞಾನಕ್ಕೆ ಸಂಬಂಧಿಸಿದಂತೆ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.