ಸೋಮವಾರಪೇಟೆ, ಆ. 2: ಕರ್ನಾಟಕ ವೀರ ಕನ್ನಡಿಗರ ಸೇನೆಯ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನÀವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾಧ್ಯಕ್ಷರಾದ ಎಸ್.ವಿ. ದಿವಾಕರ್ ಹೇಳಿದರು.
ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಮೆ ನಿರ್ಮಾಣಕ್ಕೆ ಈಗಾಗಲೇ ಪಟ್ಟಣ ಪಂಚಾಯಿತಿ ಅನುಮತಿ ನೀಡಿದೆ. ಇಲ್ಲಿನ ಮಡಿಕೇರಿ ರಸ್ತೆಯಲ್ಲಿರುವ ನೀರು ಶುದ್ದೀಕರಣ ಘಟಕದ ಸಮೀಪ ಉದ್ಯಾನವನÀಕ್ಕೆಂದು ಮೀಸಲಿರಿಸಿದ ಜಾಗದಲ್ಲಿ (ತಾಲೂಕು ಪಂಚಾಯಿತಿ ಕಚೇರಿ ಎದುರು) ಸುಮಾರು 30ಲಕ್ಷ ರೂ. ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಭಾರತೀಯ ಪ್ರಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರು ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ಜನ್ಮ ತಾಳಿದವರು. ಅವರ ಹುಟ್ಟೂರಿನಲ್ಲಿ ಸ್ಮಾರಕವನ್ನು ನಿರ್ಮಿಸುವದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಸಿ. ನಂದ ಸಂಪೂರ್ಣ ಸಹಕಾರ ನೀಡಿದ್ದಾರೆ. ಅತೀ ಶೀಘ್ರದಲ್ಲಿ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವದು ಎಂದರು.
ಗೋಷ್ಠಿಯಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಆರ್. ಜಗದೀಶ್, ಜಿಲ್ಲಾ ಸಹ ಕಾರ್ಯದರ್ಶಿ ಆರ್. ರಘು, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷೆ ಗೌರಮ್ಮ, ಪದಾಧಿಕಾರಿಗಳಾದ ಜೀವನ್ ಮತ್ತು ನಾಗರಾಜ್ ಉಪಸ್ಥಿತರಿದ್ದರು.