ಸೋಮವಾರಪೇಟೆ, ಜ. 15: ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಇಲ್ಲಿನ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ತಾಲೂಕಿನ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.ವಿದ್ಯಾರ್ಥಿಗಳಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆ ಹಾಗೂ ರಾಷ್ಟ್ರ ಭಕ್ತಿ ಮೂಡಿಸುವ ಸಲುವಾಗಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳ ಲಾಗಿದ್ದು, ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಮಾನಸ ಸಭಾಂಗಣದಲ್ಲಿ ನಡೆಯುವ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವದು ಎಂದು ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್ ಮಾಹಿತಿ ನೀಡಿದರು.
ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳನ್ನು ಪ್ರತಿಯೋರ್ವರೂ ಪಾಲಿಸು ವಂತಾಗಬೇಕು ಎಂದು ಆಶಿಸಿದರು.
ಈ ಸಂದರ್ಭ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಜಾನಕಿ ಕನ್ವೆನ್ಷನ್ ಹಾಲ್ನ ಮಾಲೀಕ ಬಿ.ಎಸ್. ಸುಂದರ್, ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಕೆಜಿ ಯಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರೂ ಸೇರಿದಂತೆ ಇತರ ಛದ್ಮವೇಷ ಸ್ಪರ್ಧೆ, 5 ನೇ ತರಗತಿಯಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಚಿಕಾಗೋದಲ್ಲಿ ವೀರ ಸನ್ಯಾಸಿ ವಿವೇಕಾನಂದ” ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಕಾಲೇಜು ವಿದ್ಯಾರ್ಥಿ ಗಳಿಗೆ “ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶ” ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.
ಸ್ಪರ್ಧೆಗಳಲ್ಲಿ ಸೋಮವಾರಪೇಟೆ ನಗರ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪುಟಾಣಿ ಮಕ್ಕಳು ಸ್ವಾಮಿ ವಿವೇಕಾನಂದ ಸೇರಿದಂತೆ ಇತರ ಛದ್ಮವೇಷಗಳನ್ನು ಧರಿಸಿ ಗಮನ ಸೆಳೆದರು.