ಕುಶಾಲನಗರ, ಜು 23 : ಈ ತಿಂಗಳ ಅಂತ್ಯದೊಳಗೆ ಹಾರಂಗಿ ಅಣೆಕಟ್ಟೆಯಿಂದ ಅಚ್ಚುಕಟ್ಟು ರೈತರ ಕೃಷಿ ಚಟುವಟಿಕೆಗಳಿಗೆ ಕಾಲುವೆ ಮೂಲಕ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ತಿಳಿಸಿದ್ದಾರೆ.ತುಂಬಿದ ಹಾರಂಗಿ ಜಲಾಶಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮಡಿಕೇರಿ ಕ್ಷೇತ್ರದ ಶಾಸಕರು ಜಂಟಿಯಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರ ರೊಂದಿಗೆ ಸಚಿವರು, ಸಧ್ಯದಲ್ಲಿಯೇ ಅಚ್ಚುಕಟ್ಟು ವ್ಯಾಪ್ತಿಯ ಶಾಸಕರು, ನೀರಾವರಿ ನಿಗಮ ಅಧಿಕಾರಿಗಳು ಬೆಂಗಳೂರಿನಲ್ಲಿ ಸಭೆ ಸೇರಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳ ದುರಸ್ತಿ ಕಾರ್ಯಕ್ಕೆ ತಕ್ಷಣವೇ ಕಾರ್ಯಯೋಜನೆ ರೂಪಿಸಲಾಗುವದು. ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಂದಿನ ದಿನಗಳಲ್ಲಿ ಸಭೆ ಕರೆಯಲಾಗುವದು ಎಂದರು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಬಹುದಿನ ಗಳಿಂದ ನೆನೆಗುದಿಗೆ ಬಿದ್ದಿದ್ದ ಹಾರಂಗಿ ಉದ್ಯಾನವನ ಯೋಜನೆ ಲೋಕಾರ್ಪಣೆ ಗೊಳ್ಳುವದರೊಂದಿಗೆ ಪ್ರವಾಸಿಗರ ಅನುಕೂಲಕ್ಕೆ ಪ್ರವೇಶಕ್ಕೆ ಅನುವು ಮಾಡಿಕೊಡಲು ತಕ್ಷಣ ದಿಂದಲೇ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಕ್ಕೂ ಮುನ್ನ ಸಚಿವರು ಹಾಗೂ ಶಾಸಕರು ಮತ್ತು ಜನಪ್ರತಿನಿಧಿಗಳು, ಅಧಿಕಾರಿಗಳು ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಕಾವೇರಿ ಮಾತೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

3 ವರ್ಷಗಳ ಅವಧಿಯಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರದ ಶಾಸಕರು ಒಂದುಗೂಡಿ ತುಂಬಿದ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದು ವಿಶೇಷವೆನಿಸಿತು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾವಸಂತ್ ಜಿಲ್ಲಾಧಿಕಾರಿ ಡಾ.ಆರ್.ವಿ.ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ನೀರಾವರಿ ನಿಗಮದ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.