ಕುಶಾಲನಗರ, ಸೆ. 7: ಹಾರಂಗಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್ಸ್ ಪ್ರಮಾಣದ ನೀರನ್ನು ನದಿಗೆ ಹರಿಸಲಾಗಿದೆ. ಕಾವೇರಿ ನೀರು ಹಂಚಿಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಮಂಗಳವಾರ ರಾತ್ರಿ 11 ಗಂಟೆಯಿಂದ ಮುಂದಿನ ಆದೇಶ ಬರುವ ತನಕ ನೀರು ನದಿಗೆ ಹರಿಸಲಾಗುವದು ಎಂದು ಹಾರಂಗಿ ಅಣೆಕಟ್ಟೆ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಕುಮಾರ್ ತಿಳಿಸಿದ್ದಾರೆ. ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ನದಿಗೆ ನೀರನ್ನು ಹರಿಸಲಾಗುತ್ತಿದ್ದು ಇದೇ ನೀರಿನಿಂದ ವಿದ್ಯುತ್ ಉತ್ಪಾದನೆ ಕೂಡ ನಡೆಯುತ್ತಿದೆ. ಕಾಲುವೆ ಮೂಲಕ 1600 ಕ್ಯೂಸೆಕ್ಸ್ ನೀರು ಹರಿಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾರಂಗಿ ಅಣೆಕಟ್ಟೆಯಲ್ಲಿ ಮಂಗಳವಾರ ಸಂಜೆ ವೇಳೆಗೆ 5.99 ಟಿಎಂಸಿ ಪ್ರಮಾಣದ ನೀರಿನ ಸಂಗ್ರಹವಿದ್ದು ಒಳಹರಿವು ಅಂದಾಜು 2500 ಕ್ಯೂಸೆಕ್ಸ್ ಇರುವದಾಗಿ ಅವರು ಮಾಹಿತಿ ನೀಡಿದ್ದಾರೆ.
ನದಿಗೆ ನೀರು ಹರಿಸಿದ ಹಿನ್ನೆಲೆಯಲ್ಲಿ ಯಾವದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಹಾರಂಗಿ ಅಣೆಕಟ್ಟೆ ವ್ಯಾಪ್ತಿಯಲ್ಲಿ ಮೊಕ್ಕಾಂ ಹೂಡಿದ್ದು 100ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿಯೋಜನೆಗೊಂಡಿದ್ದಾರೆ.