ಸಿದ್ದಾಪುರ, ಜ. 17: ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ 30 ಕ್ಕೂ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಕೈಗೊಂಡಿದೆ. ಸಿದ್ದಾಪುರ ಸಮೀಪದ ಚೌಡಿಕಾಡು, ಬಾಡಗ-ಬಾಣಂಗಾಲ, ಗಟ್ಟದಳ ವ್ಯಾಪ್ತಿಯಲ್ಲಿ ಸುಮಾರು 30 ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ಅರಣ್ಯ ಇಲಾಖಾ ಸಿಬ್ಬಂದಿಗಳು ಕಾಡಾನೆಗಳನ್ನು ಪಟಾಕಿ ಸಿಡಿಸಿ ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಂಡರು. ಬಿ.ಬಿ.ಟಿ.ಸಿ. ಹಾಗೂ ಟಾಟಾ ತೋಟದ ವ್ಯವಸ್ಥಾಪಕರು ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಕಾಫಿ ಹಣ್ಣುಗಳನ್ನು ತಿನ್ನುತ್ತಿದ್ದು, ಕಾರ್ಮಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ದೂರು ನೀಡಿದ್ದು, ದೂರಿನನ್ವಯ ಅರಣ್ಯ ಇಲಾಖಾ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಬಿ.ಬಿ.ಟಿ.ಸಿ., ಟಾಟಾ ಸೇರಿದಂತೆ ಸ್ಥಳೀಯ ಕಾಫಿ ತೋಟಗಳಲ್ಲಿ ಸುಮಾರು 30 ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂಜರಿಯುತ್ತಿದ್ದರು. ಇದರಿಂದ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಕಾಡಾನೆಗಳನ್ನು ಓಡಿಸುವ ಕಾರ್ಯಚರಣೆ ನಡೆಸಿದರು.
- ವಾಸು