ಮಡಿಕೇರಿ, ನ. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟರಿಗೆ ಆರೋಗ್ಯ ವಿಶೇಷ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಎಂ. ಶಿವಕುಮಾರ್ ಚಾಲನೆ ನೀಡಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಬಳಿ ಚಾಲನೆ ನೀಡಲಾಯಿತು. ಆರೋಗ್ಯ ಭಾಗ್ಯದಡಿ ಪರಿಶಿಷ್ಟರಿಗೆ ಇರುವ ಸೌಲಭ್ಯಗಳ ಬಗ್ಗೆ ಆರೋಗ್ಯ ಜಾಗೃತಿ ವಿಶೇಷ ಅಭಿಯಾನ ಜಿಲ್ಲೆಯ ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜರುಗಲಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ತಿಳಿಸಿದರು. ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ, ರಾಜೀವ್ ಆರೋಗ್ಯ ಭಾಗ್ಯ, ಇಂದಿರಾ ಸುರಕ್ಷಾ ಯೋಜನೆ ಹೀಗೆ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು ಅಭಿಯಾನದ ಉದ್ದೇಶವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಎಂ. ಶಿವಕುಮಾರ್ ಹೇಳಿದರು.

ಕಲಾವಿದ ಈ. ರಾಜು ಮತ್ತು ತಂಡದವರು ಆರೋಗ್ಯ ಜಾಗೃತಿ ಗೀತೆಗಳನ್ನು ಹಾಡಿ ಗಮನ ಸೆಳೆದರು. ಆರ್.ಸಿ.ಹೆಚ್. ಅಧಿಕಾರಿ ಡಾ. ನೀಲೇಶ್, ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಜಿಲ್ಲಾ ಸಂಯೋಜಕ ಹರ್ಷ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.