ಸೋಮವಾರಪೇಟೆ, ನ.21: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದ್ದು, ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೀಗಿದ್ದರೂ ಸ್ಥಳೀಯ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸುತ್ತಿದ್ದು, ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ದೂರಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಎಲ್ಲ ಜಾತಿ ಜನಾಂಗದ ಜನರೂ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿ ಮುಖಂಡರು ಕಾಂಗ್ರೆಸ್ ಕೇವಲ ಒಂದು ವರ್ಗಕ್ಕೆ ಮೀಸಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದು, ಸರ್ಕಾರದ ಮೇಲೆ ಆರೋಪ ಮಾಡುವದೇ ಬಿಜೆಪಿಯ ಅಜೆಂಡವಾಗಿದೆ ಎಂದರು.

ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಭದ್ರವಾಗಿದ್ದು, ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಜಿಲ್ಲೆಯ ಜಿ.ಪಂ., ತಾ.ಪಂ.ಗಳನ್ನು ಹೊರತು ಪಡಿಸಿದರೆ ಬಹುತೇಕ ಗ್ರಾ. ಪಂ.ಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದೆ. ಕೊಡಗಿನಲ್ಲಿ ಕಾಂಗ್ರೆಸ್ ಸಂಘಟನಾತ್ಮಕವಾಗಿ ಪ್ರಬಲವಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಬಿಜೆಪಿ ಶಾಸಕರ ಅವಧಿಯಲ್ಲಿ ಕೊಡಗು ಜಿಲ್ಲೆ ಹೆಚ್ಚಿನ ಅಭಿವೃದ್ಧಿ ಕಂಡಿಲ್ಲ. ಅದರಲ್ಲೂ ಸೋಮವಾರಪೇಟೆ ಭಾಗ ಹಿಂದುಳಿದಿರಲು ಈ ವ್ಯಾಪ್ತಿಯನ್ನು ಶಾಸಕ ಕಾರಣರಾಗಿದ್ದಾರೆ. ಚುನಾವಣೆ ಸಂದರ್ಭ ಬಡವರ ಮನೆಗೆ ಕಲ್ಲೊಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳು ವದನ್ನು ಹೊರತುಪಡಿಸಿದರೆ, ಉಳಿದಂತೆ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗುವದಿಲ್ಲ ಎಂದು ಆರೋಪಿಸಿದರು.

ಸಭೆಯಲ್ಲಿ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ನಂದಕುಮಾರ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್, ಪಕ್ಷದ ಜಿಲ್ಲಾ ವಕ್ತಾರ ಕೆ.ಕೆ. ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿ.ಎ. ಲಾರೆನ್ಸ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್, ಹಾನಗಲ್ಲು ಗ್ರಾ.ಪಂ. ಉಪಾಧ್ಯಕ್ಷ ಮಿಥುನ್, ಪ.ಪಂ. ಸದಸ್ಯ ಕೆ.ಎ. ಆದಂ, ಶೀಲಾ ಡಿಸೋಜ ಸೇರಿದಂತೆ ಇತರರು ಉಪಸ್ಥಿತರಿದ್ದರು.