ಸೋಮವಾರಪೇಟೆ, ಸೆ. 21: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕ ಮತ್ತು ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ತಾ. ಅಂದು ಇಲ್ಲಿನ ಮಹಿಳಾ ಸಮಾಜದಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಠಿ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸ ಲಾಗಿದೆ ಎಂದು ಕರವೇ ತಾಲೂಕು ಘಟಕದ ಅಧ್ಯಕ್ಷ ದೀಪಕ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 25 ರಂದು ಪೂರ್ವಾಹ್ನ 10 ಗಂಟೆಗೆ ಕಾರ್ಯಕ್ರಮವನ್ನು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ಉದ್ಘಾಟಿಸ ಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ದೀಪಕ್ ವಹಿಸಲಿದ್ದು, ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ ಕೆ.ಕೆ. ಗಂಗಾಧರ್ ವಹಿಸಲಿದ್ದಾರೆ. ಪ್ರೇಮ ಕಾವ್ಯವನ್ನು ಹೊರತುಪಡಿಸಿ ಪ್ರಚಲಿತ ವಿದ್ಯಮಾನಗಳಿಗೆ ಸಂಬಂಧಿಸಿದ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲೂ ಕನ್ನಡ ನಾಡು, ನುಡಿ, ಸಾಹಿತ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ದಿಂದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ “ಆಧುನಿಕ ಯುಗದ ನಿರ್ಮಾಣದಲ್ಲಿ ಯುವಜನರ ಪಾತ್ರ” ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಹಿಂದಿನ ಮತ್ತು ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ನಡುವೆ ಇರುವ ಆಗುಹೋಗುಗಳು” ಎಂಬ ವಿಚಾರದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಇದರೊಂದಿಗೆ ಸೋಮವಾರ ಪೇಟೆ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಿದ ಐದು ಮಂದಿ ಶಿಕ್ಷಕರನ್ನು ವಿಶೇಷವಾಗಿ ಗೌರವಿಸಲಾಗುವದು. ಸಾಹಿತ್ಯ, ಸಂಗೀತ, ನೃತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಮೂವರು ಸಾಧಕರನ್ನು ಗೌರವಿಸಲಾಗುವದು. ಕಾರ್ಯ ಕ್ರಮದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಜವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಕರವೇ ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ. ಸುದರ್ಶನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾಜ್ಯ ಪತ್ರಕರ್ತರ ಸಂಘದ ನಿರ್ದೇಶಕ ಎಸ್.ಎ. ಮುರಳೀಧರ್, ಗುತ್ತಿಗೆದಾರ ದಾವೀದ್, ವರ್ತಕ ಪುರುಷೋತ್ತಮ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ವೇದಿಕೆಯ ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್, ಕಾರ್ಯದರ್ಶಿ ನ.ಲ. ವಿಜಯ, ಕರವೇ ನಗರ ಘಟಕ ಅಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ರೂಪ ಸುರೇಶ್ ಉಪಸ್ಥಿತರಿದ್ದರು.