ಕುಶಾಲನಗರ, ಸೆ. 2: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀನಿಹಡ್ಲು ಗಿರಿಜನ ಹಾಡಿಯಲ್ಲಿ ಯಾವದೇ ರೀತಿಯ ಕಳ್ಳಬಟ್ಟಿ ದಂಧೆ ನಡೆಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಕೆ. ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.

ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿತಿಮತಿ ವ್ಯಾಪ್ತಿಯ ಆಯಿರಸುಳಿ, ಜಂಗಲ್ ಹಾಡಿ, ಚೀನಿಹಡ್ಲು ಹಾಡಿಗಳಲ್ಲಿ ಕಳ್ಳಬಟ್ಟಿ ದಂಧೆ ನಡೆಯುತ್ತಿರುವ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಮಾಡಿರುವ ಆರೋಪ ರಾಜಕೀಯ ಪ್ರೇರಿತ ಎಂದು ತಿಳಿಸಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಈ ದಂಧೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಾಡಿರುವ ಆರೋಪ ಸತ್ಯಕ್ಕೆ ದೂರ ವಾಗಿದೆ. ರಾಜಕೀಯ ದುರುದ್ದೇಶ ದಿಂದ ಕೆಲವರು ಈ ರೀತಿಯಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಸಮಿತಿಯ ಜಿಲ್ಲಾ ಉಪಾಧ್ಯಕ್ಷೆ ಹಾಗೂ ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯರೂ ಆದ ಪಿ.ಎಂ. ವಿಜಯ ಮಾತನಾಡಿ, ತಿತಿಮತಿ ವ್ಯಾಪ್ತಿಯ ಹಾಡಿಗಳಲ್ಲಿ ಅಕ್ರಮ ಕಳ್ಳಬಟ್ಟಿ ದಂಧೆ ನಡೆಯುತ್ತಿದೆ ಎಂದು ವ್ಯಕ್ತಿಯೋರ್ವನ ಕುಮ್ಮಕ್ಕಿನಿಂದ ವಿಚಾರ ಪ್ರಕಟ ಗೊಂಡಿರುವದು ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ. ಪ್ರಕರಣದಲ್ಲಿ ತನ್ನ ಹೆಸರನ್ನು ಕೂಡ ಅನಗತ್ಯವಾಗಿ ಸೇರಿಸುವ ಮೂಲಕ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಸತ್ಯಾಸತ್ಯತೆ ಅರಿಯುವ ಮೂಲಕ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿ ದ್ದಾರೆ. ಅನಾವಶ್ಯಕ ಗೊಂದಲ ಹೇಳಿಕೆ ನೀಡಿದಲ್ಲಿ ನ್ಯಾಯಾಲಯದ ಮೊರೆ ಹೋಗಬೇಕಾದ ಅನಿವಾರ್ಯತೆ ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ.

ಗೋಷ್ಠಿಯಲ್ಲಿ ರಾಜ್ಯ ಸಮಿತಿಯ ನಿರ್ದೇಶಕ ಬಿ.ಕೆ. ಮೋಹನ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜೆ.ಎಲ್. ರಮೇಶ, ಜಿಲ್ಲಾ ನಿರ್ದೇಶಕ ಪೊನ್ನು ಇದ್ದರು.