ಮಡಿಕೇರಿ, ಸೆ. 21 : ನಾಡಿನ ಜೀವ ನದಿ ಕಾವೇರಿ ಉಗಮ ಸ್ಥಳ ತಲಕಾವೇರಿಯಲ್ಲಿ ಇದೇ ಅಕ್ಟೋಬರ್, 17ರಂದು ಬೆಳಗಿನ ಜಾವ ಜರುಗುವ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ನಡೆದ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವದರಿಂದ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದಲ್ಲಿ ಭಕ್ತಾದಿಗಳ ಅನುಕೂಲಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕುಂಡಿಕೆ ಬಳಿ ನೂಕುನುಗ್ಗಲು ಆಗದಂತೆ ಅಗತ್ಯ ಬ್ಯಾರಿಕೇಡ್ಗಳ ನಿರ್ಮಾಣ, ವಾಹನ ನಿಲುಗಡೆಗೆ ವ್ಯವಸ್ಥೆ, ಭಕ್ತಾದಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸುವದು, ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವದು, ರಸ್ತೆಯ ಗುಂಡಿ ಮುಚ್ಚುವದು, ರಾತ್ರಿ ವೇಳೆ ವಿದ್ಯುತ್ ಸಂಪರ್ಕ ಕಲ್ಪಿಸುವದು, ಜೊತೆಗೆ ತಲಕಾವೇರಿಗೆ ಸಾಗುವ ಮಾರ್ಗದ ಉದ್ದಕ್ಕೂ ವಿದ್ಯುತ್ ದೀಪ ಅಳವಡಿಸುವದು, ತಲಕಾವೇರಿ ಮತ್ತು ಭಾಗಮಂಡಲದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡುವದು ಹಾಗೆಯೇ ಅಂಬ್ಯುಲೆನ್ಸ್ ಸೌಲಭ್ಯ, ಶುಚಿತ್ವಕ್ಕೆ ಒತ್ತು ನೀಡುವದು, ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಮಾಡಿರುವದರಿಂದ ಈ ಬಗ್ಗೆ ನಾಮಫಲಕ ಅಳವಡಿಸುವದು. ಮತ್ತಿತರ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಜಾತ್ರಾ ಸಂದರ್ಭದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಮಾಹಿತಿ ಒದಗಿಸುವಂತಾಗಬೇಕು. ಸಹಾಯವಾಣಿ ಕೇಂದ್ರ ತೆರೆಯುವದು ಮತ್ತಿತರ ಸಂಬಂಧಿಸಿದಂತೆ ಅವರು ಸಲಹೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವದರಿಂದ ತಲಕಾವೇರಿ ಬಳಿ ವಾಹನ ನಿಲುಗಡೆಗೆ ಅಗತ್ಯ ಕ್ರಮಕೈಗೊಳ್ಳಲಾಗುವದು. ತಲಕಾವೇರಿಯಲ್ಲಿ ಬ್ಯಾರಿಕೇಡ್ ನಿರ್ಮಾಣ, ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗುವದು. ಜೊತೆಗೆ ಪಾರ್ಕಿಂಗ್ ಸಂಬಂಧ ಸೂಚನಾ ಫಲಕ ಅಳವಡಿಸಲಾಗುವದು ಎಂದು ತಿಳಿಸಿದರು.
(ಮೊದಲ ಪುಟದಿಂದ) ಭಕ್ತಾದಿಗಳ ಸುರಕ್ಷತೆ ಸಂಬಂಧಿಸಿದಂತೆ ಹೆಚ್ಚಿನ ನಿಗಾ ವಹಿಸಲಾಗುವದು. ಈ ಸಂಬಂಧ ಎನ್.ಸಿ.ಸಿ. ಕೆಡೆಟ್ಗಳ ನಿಯೋಜನೆ ಮಾಡಲಾಗುವದು. ಸಹಾಯವಾಣಿ ಕೇಂದ್ರ ತೆರೆಯಲು ಅಗತ್ಯ ಕ್ರಮಕೈಗೊಳ್ಳಲಾಗುವದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕಾವೇರಿ ತುಲಾ ಸಂಕ್ರಮಣ ಜಾತ್ರೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾವೇರಿ ತುಲಾ ಸಂಕ್ರಮಣ ಜಾತ್ರೆ ಸಂಬಂಧ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅವರು ಸೂಚನೆ ನೀಡಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಛಬ್ಬಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಕೆ.ಎಸ್.ಆರ್.ಟಿ.ಸಿ. ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ರಮಾನಾಥ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಳ್ಳಯ್ಯ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ನಗರಸಭೆ ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ.ಜಗನ್ನಾಥ್, ತಹಶೀಲ್ದಾರ್ ಕುಸುಮ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸೆಸ್ಕ್ ಎಂಜಿನಿಯರ್, ಕೃಷಿ, ಶಿಕ್ಷಣ, ಅಬಕಾರಿ ನಾನಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಿಂದ ಆಗಬೇಕಿರುವ ಪೂರ್ವಸಿದ್ಧತೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.