ಕುಶಾಲನಗರ, ಡಿ 29: ಕಾವೇರಿ ನದಿ ತೀರದ ಸ್ವಚ್ಛತೆ, ತ್ಯಾಜ್ಯ ವಸ್ತುಗಳ ವಿಲೇವಾರಿ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡುವ ಬಗ್ಗೆ ಸಿಎಸ್ಆರ್ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳ ಅಂದಾಜು ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಿಎಸ್ಆರ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ತಟದಲ್ಲಿ ಗುರುತಿಸಲಾಗಿರುವ 23 ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯಿತಿ ಮತ್ತು ನಗರಸಭೆಗಳಿಗೆ ಈ ಬಗ್ಗೆ ಪತ್ರ ಬರೆದು ಅವರವರ ಕಾರ್ಯವ್ಯಾಪ್ತಿಯಲ್ಲಿ ಸಿಎಸ್ಆರ್ ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಸಧ್ಯದಲ್ಲಿಯೇ ಈ ಬಗ್ಗೆ ಚರ್ಚಿಸಲು ಜಿಲ್ಲೆಯ ದೊಡ್ಡ ಮತ್ತು ಮಧ್ಯಮ ಕೈಗಾರಿಕೆಗಳ ಉದ್ದಿಮೆದಾರರ ಸಭೆ ಕರೆಯುವದು, ಸಂಸ್ಥೆಗಳ ವಾರ್ಷಿಕ ವಹಿವಾಟು ಹಾಗೂ ಶೇ.2 ರ ನಿವ್ವಳ ಲಾಭಾಂಶವನ್ನು ವಲಯವಾರು ಹಾಗೂ ಆದ್ಯತೆಯನುಸಾರ ಕಾವೇರಿ ನದಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಚಟುವಟಿಕೆಗಳನ್ನು ನಡೆಸಲು ನಿರ್ಧಾರ ಕೈಗೊಳ್ಳಲಾಗುವದೆಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಪ್ರಧಾನ ಕಾರ್ಯದರ್ಶಿ ಮೊಂತಿ ಗಣೇಶ್ ನದಿ
(ಮೊದಲ ಪುಟದಿಂದ) ಸಂರಕ್ಷಣೆ ಹಾಗೂ ಸ್ವಚ್ಛತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕಾವೇರಿ ನದಿ ತಟಗಳನ್ನು ಜಿಲ್ಲಾಡಳಿತದ ವಶಕ್ಕೆ ಪಡೆಯುವದರೊಂದಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ನದಿಗೆ ನೇರವಾಗಿ ಸೇರುವ ತ್ಯಾಜ್ಯಗಳನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕಾಗಿದೆ. ನದಿ ತಟದಲ್ಲಿರುವ ಪ್ರವಾಸಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ, ತಟದ ಜನತೆಗೆ ಸ್ವಚ್ಛತೆ ಬಗ್ಗೆ ಅರಿವು ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಕೊಡಗು ಗ್ರೀನ್ ಸಿಟಿ ಫೋರಂನ ಸಂಚಾಲಕ ಹಾಗೂ ಕೊಡಗು ಟೂರಿಸಂ ಅಸೋಸಿಯೇಷನ್ ಅಧ್ಯಕ್ಷ ಚೈಯಂಡ ಸತ್ಯ ಮಾತನಾಡಿ, ತಲಕಾವೇರಿಯಲ್ಲಿ ಸ್ವಚ್ಛತೆ ಕಾಪಾಡುವದರೊಂದಿಗೆ ದಾರಿಯುದ್ದಕ್ಕೂ ಖಾಲಿ ಬಾಟಲಿ ಹಾಗೂ ಪ್ಲಾಸ್ಟಿಕ್ ಎಸೆಯುವ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಭಾಗಮಂಡಲದಿಂದ ತಲಕಾವೇರಿಗೆ ತೆರಳುವ ಯಾತ್ರಿಕರಿಗೆ ಜಿಲ್ಲಾಡಳಿತದಿಂದ ಬಸ್ ಸೌಕರ್ಯ ಕಲ್ಪಿಸುವ ಮೂಲಕ ಕ್ಷೇತ್ರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಬಗ್ಗೆ ಸಭೆಗೆ ತಿಳಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ, ಪ್ರವಾಸಿಗರಿಗೆ ಶುದ್ಧ ಕುಡಿವ ನೀರು ಒದಗಿಸಲು ಯೋಜನೆ ರೂಪಿಸುವದು ಹಾಗೂ ಸಿಎಸ್ಆರ್ ಯೋಜನೆಯಡಿಯಲ್ಲಿ ಉದ್ದಿಮೆದಾರರು ಕಡ್ಡಾಯವಾಗಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬದ್ಧರಾಗಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಈ ಬಗ್ಗೆ ಮಾತನಾಡಿ, ಜಿಲ್ಲೆಯ 23 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮಡಿಕೇರಿ ನಗರಸಭೆ, ವೀರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಸಭೆ ಕರೆದು ನದಿ ಸಂರಕ್ಷಣೆ ಹಾಗೂ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವದು ಎಂದರು.
ಈ ಸಂದರ್ಭ ಟಾಟಾ ಸಂಸ್ಥೆಯ ಪ್ರತಿನಿಧಿಗಳು, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್, ಕಾವೇರಿ ನದಿ ಜಾಗೃತಿ ಸಮಿತಿಯ ಸಂಚಾಲಕ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಕೂರ್ಗ್ ಇಂಟರ್ನ್ಯಾಷನಲ್ ವ್ಯವಸ್ಥಾಪಕ ನಿರ್ದೇಶಕ ಶರವಣನ್, ಉದ್ಯಮಿ ಸುಧಾ ಪೆಮ್ಮಯ್ಯ, ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಶಬ್ಬೀರ್ ಪಾಷ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಗನ್ನಾಥ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.