ಸೋಮವಾರಪೇಟೆ, ಜ.13: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೆರೆಕೊಪ್ಪ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ತಕ್ಷಣ ಪರಿಹರಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ ಮೂರು ವರ್ಷಗಳ ಹಿಂದೆ ಗ್ರಾಮದಲ್ಲಿ ಕೊಳವೆ ಬಾವಿಯನ್ನು ತೆಗೆಯಲಾಗಿತ್ತು. ಆದರೆ, ಕೊಳವೆ ಬಾವಿ ದುಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ನೀರು ದೊರೆಯುತ್ತಿರಲಿಲ್ಲ. ನಂತರ ನೂತನ ಕೊಳವೆಬಾವಿಯನ್ನು ತೆಗೆದು ವಿದ್ಯುತ್ ಸಂಪರ್ಕವನ್ನು ಸಹ ನೀಡಲಾಗಿದ್ದರೂ, ಪೈಪ್ ಲೈನ್ ಕಾಮಗಾರಿಯನ್ನು ಸರಿಯಾಗಿ ಮಾಡದೇ ಇರುವದರಿಂದ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ ಎಂದು ಗ್ರಾಮದ ಕೆ.ಡಿ. ಗಿರೀಶ್ ಆರೋಪಿಸಿದರು.

ಮುಂದಿನ ಒಂದೆರಡು ದಿನಗಳಲ್ಲಿ ಪೈಪ್ ಲೈನ್ ಅಳವಡಿಸುವದಾಗಿ ಹೇಳಿ ಇದ್ದ ಹಳೆಯ ಪೈಪ್‍ಲೈನ್ ತೆಗೆದುಹಾಕಿದ್ದರಿಂದ ಸಮಸ್ಯೆ ಹೆಚ್ಚಾಗಿದೆ ಎಂದರು. ಇತ್ತೀಚೆಗೆ ಜಿಲ್ಲಾಧಿಕಾರಿಯವರು ಶಾಂತಳ್ಳಿಯಲ್ಲಿ ನಡೆದ ಜನಸಂಪರ್ಕ ಸಭೆಗೆ ಆಗಮಿಸಿದ ಸಂದರ್ಭ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಮುಂದಿನ ಒಂದು ವಾರದೊಳಗಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಇದುವರೆಗೂ ಸಮಸ್ಯೆ ಬಗೆಹರಿದಿಲ್ಲ ಎಂದು ಗ್ರಾಮಸ್ಥರಾದ ಬಿ.ಎಂ. ಗಣೇಶ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಯಂತರ ಭಾಸ್ಕರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಸರಕಾರದ ಬರ ಪರಿಹಾರದಲ್ಲಿ ರೂ. 5ಲಕ್ಷ ಹಣ ಬಿಡುಗಡೆಯಾಗಿದೆ. ಸಂಬಂಧಿಸಿದ ಗುತ್ತಿಗೆದಾರರು ಕಾಮಗಾರಿಯನ್ನು ನಿರ್ವಹಿಸುತ್ತಿದ್ದು, ಒಂದು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಗ್ರಾಮದ ಯು.ಕೆ. ಶಿವರಾಜು, ಸಿ.ಎ. ಚಂಗಪ್ಪ, ಕೆ.ಆರ್. ಲಿಂಗರಾಜು ಹಾಗೂ ಕೆ.ಆರ್. ಗಣಪತಿ, ಲಕ್ಷ್ಮೀಕಾಂತ್ ಮತ್ತಿತರರು ಪಾಲ್ಗೊಂಡಿದ್ದರು.