ಮಡಿಕೇರಿ, ಡಿ. 12: ಕುಡಿಯುವ ನೀರು ಕಾಮಗಾರಿಗಾಗಿ ಬಿಡುಗಡೆ ಯಾಗಿರುವ ಅನುದಾನವನ್ನು ಕೂಡಲೇ ಬಳಕೆ ಮಾಡಬೇಕು. ಇಲ್ಲದಿದ್ದಲ್ಲಿ ಪ್ರಸಕ್ತ ವರ್ಷಕ್ಕೆ ಅನುದಾನ ಬಿಡುಗಡೆಯಾಗುವದಿಲ್ಲ. ಆದ್ದರಿಂದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಆದ್ಯತೆ ಮೇಲೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸ್ಪಷ್ಟ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಜಾನುವಾರುಗಳಿಗೆ ಮೇವು ಮತ್ತಿತರ ವಿಷಯಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವರ್ಷ ಕುಡಿಯುವ ನೀರಿಗಾಗಿ ಒಂದು ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಅನುದಾನ ಬಳಕೆ ಅಷ್ಟಾಗಿ ಆಗಿಲ್ಲ. ಇದರಿಂದ ಪ್ರಸಕ್ತ ವರ್ಷಕ್ಕೆ ಕುಡಿಯುವ ನೀರು ಕಾಮಗಾರಿಗಳಿಗೆ ಹಣ ಕೇಳುವದಾ ದರೂ ಹೇಗೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು.

ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಸಮರ್ಪ ಕವಾಗಿ ನಿರ್ವಹಿಸುವಂತೆ ಇಂಜಿನಿ ಯರ್‍ಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ದೂರುಗಳು ಕೇಳಿ ಬಂದರೆ ಸಂಬಂಧಪಟ್ಟ ಇಂಜಿನಿಯರ್‍ಗಳನ್ನೇ ಹೊಣೆಗಾರರ ನ್ನಾಗಿ ಮಾಡಲಾಗುವದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಕುಡಿಯುವ ನೀರು ಸಮಸ್ಯೆ ನಿವಾರಣೆ ಸಂಬಂಧ ಸರ್ಕಾರ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಿದೆ. ಸಮಿತಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸ ಬೇಕಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಜಾನುವಾರುಗಳಿಗೆ ಮೇವು ಮತ್ತಿತರ ಸಂಬಂಧ ಅಗತ್ಯ ಮಾಹಿತಿಯನ್ನು ಒದಗಿಸಬೇಕು, ಬರ ಕಾಮಗಾರಿಗಳನ್ನು ಆದಷ್ಟು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಇಂಜಿನಿಯರ್‍ಗಳಿಗೆ ಸೂಚನೆ ನೀಡಿದರು.

ಜಿ.ಪಂ. ಉಪ ಕಾರ್ಯದರ್ಶಿ, ಯೋಜನಾ ನಿರ್ದೇಶಕರು, ಮುಖ್ಯ ಯೋಜನಾಧಿಕಾರಿಗಳು, ಇಂಜಿನಿ ಯರ್‍ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಎಂ. ಸತೀಶ್ ಕುಮಾರ್ ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿ ಪ್ರಗತಿ ಸಂಬಂಧಿಸಿದಂತೆ ಜಿ.ಪಂ. ಕುಡಿಯುವ ನೀರು ವಿಭಾಗದ ಇಂಜಿನಿಯರ್, ಶಶಿಧರ, ಮೂರು ತಾಲೂಕಿನ ಎಇಇಗಳು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಯೋಜನಾ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ತಾ.ಪಂ. ಇಒಗಳಾದ ಪಡ್ನೇಕರ್, ಚಂದ್ರಶೇಖರ್, ತಹಶೀಲ್ದಾರ್‍ಗಳಾದ ಕುಸುಮಾ, ಕೃಷ್ಣ, ಮಹಾದೇವ ಸ್ವಾಮಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಸಿ. ನಾಗರಾಜು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಸಹಕಾರ ಇಲಾಖೆ ಉಪ ನಿಬಂಧಕರಾದ ವಿಜಯಕುಮಾರ್, ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಹಲವು ಮಾಹಿತಿ ನೀಡಿದರು.