ಕುಶಾಲನಗರ, ಸೆ. 6: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಆಶ್ರಯದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಮಾನವ ಸರಪಳಿ ರಚಿಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಇದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.
ಈ ಸಂದರ್ಭ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ವಿವಿಧ ಯೋಜನೆಗಳ ಹೆಸರಿನಲ್ಲಿ ಆಶ್ವಾಸನೆ ನೀಡುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ಇದೀಗ ಜನರನ್ನು ಭ್ರಮನಿರಸನಗೊಳಿಸಿದ್ದಾರೆ. ಯಾವದೇ ರೀತಿಯ ರಚನಾತ್ಮಕ ಆಡಳಿತ ನಡೆಸದ ಕಾರಣ ಹಲವು ಕ್ಷೇತ್ರಗಳಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ದೂರಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರದ ಮೇಲೆ ಜನಸಾಮಾನ್ಯರು ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ದೇಶದಾದ್ಯಂತ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಮೇಲೆ ಕಾಳಜಿ ಇಲ್ಲದ ಪ್ರಧಾನಿ ಇದೀಗ ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿರುವದು ದುರಂತ ಎಂದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಕುಶಾಲನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೂಡಾ ಅಧ್ಯಕ್ಷರಾದ ಎಸ್.ಎನ್. ನರಸಿಂಹಮೂರ್ತಿ, ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಕುಶಾಲನಗರ ಪಟ್ಟಣ ಪಂಚಾಯ್ತಿ ಸದಸ್ಯರಾದ ಶಿವಶಂಕರ್, ಪ್ರಮುಖರಾದ ಪುಷ್ಪಲತಾ ಮತ್ತಿತರರು ಇದ್ದರು.