ಸೋಮವಾರಪೇಟೆ, ಆ. 31: ದೇಶದಲ್ಲಿ 130 ಕೋಟಿ ಜನಸಂಖ್ಯೆಯಿದ್ದರೂ ಒಲಿಂಪಿಕ್ಸ್‍ನಲ್ಲಿ ಒಂದು ಚಿನ್ನದ ಪದಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ಹರಿಸುವದರ ಮೂಲಕ ಕ್ರೀಡೆಗೆ ಹೆಚ್ಚು ಒತ್ತು ನೀಡುವಂತಾಗಬೇಕು ಎಂದು ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಜೂನಿಯರ್ ಇಂಡಿಯಾ ಮಾಜಿ ಅಂತರರಾಷ್ಟ್ರೀಯ ಆಟಗಾರ ಕೆ.ಪಿ. ರಾಯ್ ಹೇಳಿದರು.

ಇಲ್ಲಿಗೆ ಸಮೀಪದ ಯಡವಾರೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸೋಮವಾರಪೇಟೆ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚೆಗೆ ಮುಕ್ತಾಯಗೊಂಡ ರಿಯೋ ಒಲಿಂಪಿಕ್ಸ್‍ನಲ್ಲಿ ದೇಶದ ಯಾವೊಬ್ಬ ಕ್ರೀಡಾಪಟು ಕೂಡ ಒಂದೇ ಒಂದು ಚಿನ್ನದ ಪದಕವನ್ನು ಗಳಿಸಲು ಸಾಧ್ಯವಾಗಲಿಲ್ಲ.

ಹಾಕಿಯಲ್ಲಿ ಈವರೆಗೆ 8 ಚಿನ್ನದ ಪದಕಗಳನ್ನು ಗಳಿಸಿದ್ದ ಭಾರತ ತಂಡ ಫೈನಲ್ ಪ್ರವೇಶಿಸಲು ಕೂಡ ವಿಫಲವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಪ್ರಾಥಮಿಕ ಹಂತದಿಂದಲೇ ಪೋಷಕರು, ಶಿಕ್ಷಕರು ಹಾಗೂ ಸರ್ಕಾರ ಪಠ್ಯದ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಬೇಕು. ಹಾಗಾದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ದೇಶದಲ್ಲಿ ಕ್ರೀಡೆಗಳು ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಸಬಿತ ಚನ್ನಕೇಶವ, ಯಡವಾರೆ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜನಾರ್ಧನ್, ಮುಖ್ಯೋಪಾಧ್ಯಾಯ ತಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ವಾಲಿಬಾಲ್, ಫುಟ್‍ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಸೇರಿದಂತೆ ಹಲವು ಕ್ರೀಡೆಗಳು ಜರುಗಿದವು. ಸೋಮವಾರಪೇಟೆ ವಲಯ(ಎ)ದ 14 ವಿವಿಧ ಶಾಲೆಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.