ಕುಶಾಲನಗರ, ಡಿ. 28: ಗ್ರಾಮ ಪಂಚಾಯಿತಿ ನೌಕರರ 3ನೇ ಕೊಡಗು ಜಿಲ್ಲಾ ಸಮ್ಮೇಳನ ಜನವರಿ 8 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್. ಭರತ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಂಗವಾಗಿ ಅಂದು ಬೆಳಿಗ್ಗೆ 11 ಗಂಟೆಗೆ ಬೈಚನಹಳ್ಳಿಯ ಮಾರಿಯಮ್ಮ ದೇವಾಲಯದಿಂದ ಸಭಾ ವೇದಿಕೆವರೆಗೆ ವಾದ್ಯಗೋಷ್ಠಿ, ಕಲಾತಂಡಗಳ ಭವ್ಯ ಮೆರವಣಿಗೆ ನಡೆಯಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಜಾಥಾಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಪಿ.ಆರ್. ಭರತ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಹಿರಂಗ ಅಧಿವೇಶನವನ್ನು ಸಂಘದ ರಾಜ್ಯ ಅಧ್ಯಕ್ಷ ಮಾರುತಿ ಮಾನ್ಪಡೆಯವರು ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ ನಡೆಯಲಿರುವ ಪ್ರತಿನಿಧಿ ಸಮ್ಮೇಳನವನ್ನು ಕೊಡಗು ಜಿಲ್ಲಾ ಸಿಐಟಿಯು ಅಧ್ಯಕ್ಷರಾದ ಡಾ. ಐ.ಆರ್. ದುರ್ಗಾಪ್ರಸಾದ್ ಉದ್ಘಾಟಿಸಲಿದ್ದಾರೆ. 7.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಮ್ಮೇಳನದಲ್ಲಿ ಪ್ರಸ್ತುತ ಗ್ರಾಮ ಪಂಚಾಯಿತಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆಗಳು ಸೇರಿದಂತೆ ಮುಂದಿನ ಹೋರಾಟಗಳ ರೂಪುರೇಷೆಗಳ ಕುರಿತಾದ ವಿಚಾರಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿ.ಆರ್. ರವಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಿ.ಎಸ್. ಪುನಿತ್ ಕುಮಾರ್, ಖಜಾಂಚಿ ಎಂ.ಎ. ಅಮೀರ್, ಸದಸ್ಯರಾದ ಶ್ರೀನಿವಾಸ್ ಇದ್ದರು.