ಸೋಮವಾರಪೇಟೆ, ಜ. 23: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ ಅನಂತ್‍ಕುಮಾರ್ ಅವರನ್ನು ಮೂವರು ಬಿಜೆಪಿ ಸದಸ್ಯರು ಸಭಾಂಗಣದಿಂದ ಹೊರದಬ್ಬಿದ್ದು, ಈ ಮೂವರ ತಾ.ಪಂ. ಸದಸ್ಯತ್ವ ವಜಾಗೊಳಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಪ್ರತಿಭಟನೆಯ ಉದ್ದಕ್ಕೂ ತಾ.ಪಂ.ನ ಬಿಜೆಪಿ ಸದಸ್ಯರುಗಳು ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಸದಸ್ಯರಾದ ಬಲ್ಲಾರಂಡ ಮಣಿ ಉತ್ತಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಧರ್ಮಪ್ಪ, ಸದಸ್ಯರಾದ ಎಂ.ಕೆ.ಚಂಗಪ್ಪ, ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಶಾಸಕ ಅಪ್ಪಚ್ಚು ರಂಜನ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಜಿಲ್ಲಾ ಕಾಂಗ್ರೆಸ್‍ನ ಪ್ರಬಾರ ಅಧ್ಯಕ್ಷ ಟಿ.ಪಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ನೇತೃತ್ವದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಭಿವೃದ್ಧಿ ಬಗ್ಗೆ ಚರ್ಚಿಸಬೇಕಾದ ಸಾಮಾನ್ಯ ಸಭೆಯಲ್ಲಿ ಬಿಜೆಪಿಯವರು ಪುಂಡಾಟಿಕೆಯ ಮೂಲಕ ವಿರೋಧ ಪಕ್ಷದವರನ್ನು

(ಮೊದಲ ಪುಟದಿಂದ) ಬಗ್ಗುಬಡಿಯಲು ಮುಂದಾಗಿದ್ದು, ಇದಕ್ಕೆ ಇತಿಶ್ರೀ ಹೇಳಬೇಕು. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶ್ರೀರಕ್ಷೆ. ಸಭಾ ನಿಯಮಾವಳಿ ಉಲ್ಲಂಘಿಸಿದ ಬಿಜೆಪಿಯ ಮೂವರು ಸದಸ್ಯರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸಭಾಂಗಣದಿಂದ ಹೊರದಬ್ಬಿ, ತೇಜೋವಧೆ ಮಾಡಿರುವದು ಅತ್ಯಂತ ಖಂಡನೀಯ. ಈ ಮೂವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವ ತನಕ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ತಾಲೂಕು ಪಂಚಾಯಿತಿಯಲ್ಲಿ ಕೆಲ ಸದಸ್ಯರು ರೌಡಿಶೀಟರ್‍ಗಳಾಗಿದ್ದಾರೆ ಹಾಗೂ ಇನ್ನೂ ಕೆಲವರು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರು ಇರುವದರಿಂದ ಕಾಂಗ್ರೆಸ್ ಸದಸ್ಯರು ಮುಂದಿನ ಸಾಮಾನ್ಯ ಸಭೆ ನಡೆಯುವ ಸಂದರ್ಭ ಇದನ್ನು ಪ್ರಶ್ನಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸದಸ್ಯ ಅನಂತ್‍ಕುಮಾರ್ ಅವರು ತಮ್ಮ ಬಳಿಯಿದ್ದ ಹಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ಸೂಕ್ತ ದಾಖಲಾತಿಗಳನ್ನು ನೀಡಿದ್ದಾರೆ. ಇವರ ಮೇಲೆ ಯಾವದೇ ಎಫ್‍ಐಆರ್ ದಾಖಲಾಗಿಲ್ಲ. ಆದರೂ ಸಹ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಗೂಂಡಾವರ್ತನೆ ತೋರುತ್ತಿದ್ದು, ಇದು ಮುಂದುವರೆದರೆ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ. ಶಶಿಧರ್ ಹೇಳಿದರು.

ಇಂತಹ ಘಟನೆಗಳು ನಡೆಯುವ ಸಂದರ್ಭ ಅಧ್ಯಕ್ಷರು ಮೂಕಪ್ರೇಕ್ಷಕರಾಗಿದ್ದರು. ತಮ್ಮ ಅಧಿಕಾರವನ್ನು ಮರೆತಿರುವ ಅಧ್ಯಕ್ಷರ ಕ್ರಮ ಖಂಡನೀಯ. ಬಿಜೆಪಿ ಹಾಗೂ ಜೆಡಿಎಸ್ ಸೇರಿಕೊಂಡು ಕಾಂಗ್ರೆಸ್‍ನ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಆಸ್ಪದ ನೀಡಬಾರದು ಎಂದು ಶಶಿಧರ್ ಹೇಳಿದರು.

ಐಎನ್‍ಟಿಯುಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ಕಾಂಗ್ರೆಸ್ ಸದಸ್ಯರನ್ನು ಸಭೆಯಿಂದ ಹೊರದಬ್ಬಿರುವ ಕ್ರಮ ತೀವ್ರ ಖಂಡನೀಯ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳಿಗೆ ಅವಕಾಶ ನೀಡುವದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕುಮುದಾ ಧರ್ಮಪ್ಪ, ಕೆ.ಪಿ. ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯರಾದ ಸುಹಾದ ಅಶ್ರಫ್, ಅನಂತ್ ಕುಮಾರ್, ಬಿ.ಬಿ. ಸತೀಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್, ಮಹಿಳಾ ಕಾಂಗ್ರೆಸಿನ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಪ್ರಮುಖರಾದ ಎಸ್.ಎಂ. ಚಂಗಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಆದಂ, ಶೀಲಾ ಡಿಸೋಜ, ಯುವ ಕಾಂಗ್ರೆಸ್‍ನ ಚೇತನ್, ಮಿಥುನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಚುನಾಯಿತ ಸದಸ್ಯರನ್ನು ಸಭೆಯಿಂದ ನಿಯಮ ಬಾಹಿರವಾಗಿ ಹೊರದಬ್ಬಿರುವ ಬಿಜೆಪಿಯ ಮೂವರು ಸದಸ್ಯರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಬೇಕು ಮತ್ತು ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹಿಸುವ ಮನವಿ ಪತ್ರವನ್ನು ತಾಲೂಕು ತಹಶೀಲ್ದಾರ್ ಕೃಷ್ಣ ಹಾಗೂ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್ ಅವರುಗಳಿಗೆ ನೀಡಿದರು.

ಸೋಮವಾರಪೇಟೆ ಪೊಲೀಸ್ ವೃತ ನಿರೀಕ್ಷಕ ಪರಶಿವಮೂರ್ತಿ, ಠಾಣಾಧಿಕಾರಿ ಮಂಚಯ್ಯ ಸೇರಿದಂತೆ ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.