ಮೂರ್ನಾಡು, ಸೆ. 17: ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮೂರ್ನಾಡು ಮಾರುತಿ ಸಂಯುಕ್ತ ಪ್ರೌಢಶಾಲೆ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಇತ್ತೀಚೆಗೆ ಚಾಲನೆ ದೊರಕಿತು.

ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾದ ಕ್ರೀಡಾಕೂಟವನ್ನು ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಕ್ರೀಡಾ ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು, ವಿದ್ಯೆಯೊಂದಿಗೆ ಕ್ರೀಡೆಯಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಶಿಸ್ತು ಮೈಗೂಡಿಸಿಕೊಳ್ಳಲು ಸಹಕಾರಿ ಯಾಗುವದರೊಂದಿಗೆ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಕ್ರೀಡಾ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯ ಅಲ್ಲ ಭಾಗವಹಿಸುವದು ಮುಖ್ಯ. ವಿದ್ಯಾರ್ಥಿಗಳು ಪಠ್ಯ ದೊಂದಿಗೆ ಪಠ್ಯೇತರ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನಾ ಮಾತನಾಡಿದರು.

ಮಾರುತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಕೆ. ಅಪ್ಪಚ್ಚು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಂಞಪ್ಪ ಪವಿತ್ರ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೆಗೌಡ, ಮಡಿಕೇರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಮೃತ್ಯುಂಜಯ, ಮಾರುತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಜಿ. ದೇವಯ್ಯ, ಉಪಾಧ್ಯಕ್ಷ ಬಿ.ಎಂ. ಅರುಣ್ ಅಪ್ಪಚ್ಚು, ಪ್ರಾಂಶುಪಾಲೆ ರಾಣಿ ಅಪ್ಪಯ್ಯ, ಶಾಲಾ ದೈಹಿಕ ಶಿಕ್ಷಕಿ ಸುಶೀಲ್ ಇನ್ನಿತರರು ಹಾಜರಿದ್ದರು.

ವಿವಿಧ ಶಾಲಾ ಕ್ರೀಡಾಪಟು ಗಳಿಂದ ಪಥಸಂಚಲನ ನಡೆಸಿ ಪ್ರಮಾಣ ವಚನ ಸ್ವೀಕರಿಸಿದರು, ಮಾರುತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.