ಮಡಿಕೇರಿ, ಡಿ. 28: ಬುಡಕಟ್ಟು ಆದಿವಾಸಿ ಪ್ರಮುಖರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಿಡ್ಡಳ್ಳಿಯ ಘಟನೆಗೆ ಸಂಬಂಧ ಮಾಹಿತಿ ಪಡೆಯಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವದು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎ. ಮುನಿಯಪ್ಪ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಡ್ಡಳ್ಳಿಯ ಆದಿವಾಸಿ ಮೂಲ ನಿವಾಸಿ ಗಿರಿಜನರು ದೌರ್ಜನ್ಯ ಸಂಬಂಧ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಆದರೆ ನೋಟೀಸ್ ನೀಡಿ ತೆರವುಗೊಳಿಸಬೇಕಿತ್ತು. ಗಿರಿಜನರಿಗೆ ಮೂಲ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಕೈಗೊಳ್ಳುತ್ತದೆ ಎಂದು ಅವರು ತಿಳಿಸಿದರು.
ಯಾರಿಗೂ ಯಾವ ರೀತಿಯಲ್ಲಿ ತೊಂದರೆಯಾಗದಂತೆ ಪುನರ್ ವಸತಿ ಕಲ್ಪಿಸಲು ವ್ಯವಸ್ಥೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಅಧ್ಯಕ್ಷರು ನುಡಿದರು.
ಪಾಲೆಮಾಡು ಗ್ರಾಮದಲ್ಲಿ ಒಂದು ತಿಂಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರು, ಬೀದಿ ದೀಪ, ಖಾತೆ ಬದಲಾವಣೆ ಸೇರಿದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಆಯೋಗದ ಸದಸ್ಯ ಎನ್. ದಿವಾಕರ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಐಟಿಡಿಪಿ ಅಧಿಕಾರಿ ಮಾಯಾದೇವಿ ಗಲಗಲಿ ಇತರರು ಇದ್ದರು.