ಮಡಿಕೇರಿ, ಜ.25 : ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಅರ್ಜಿದಾರ ರೊಂದಿಗೆ ದರ್ಪದಿಂದ ವರ್ತಿಸು ತ್ತಿದ್ದಾರೆ ಎಂದು ಆರೋಪಿಸಿರುವ ಮಾನವ ಹಕ್ಕು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾ .27 ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮಹಿಳಾ ಘಟಕದ ಕಾರ್ಯದರ್ಶಿ ಹೆಚ್.ಫಾತಿಮಾ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಜನಸಾಮಾನ್ಯರು ಸಂಕಷ್ಟ ಎದುರಿಸು ತ್ತಿದ್ದಾರೆ ಎಂದು ಆರೋಪಿಸಿದರು.

ತಹಶೀಲ್ದಾರ್ ಕಚೇರಿ ಹಾಗೂ ನಗರಸಭೆಯಲ್ಲಿ ಸಕಾಲದಲ್ಲಿ ಅರ್ಜಿಗಳು ವಿಲೇವಾರಿಯಾಗದೆ ಇರುವದರಿಂದ ಬೇಸತ್ತ ಅರ್ಜಿದಾರರು ನಮ್ಮ ಸಂಸ್ಥೆಗೆ ದೂರು ನೀಡಿದ್ದಾರೆ. ಈಗಾಗಲೇ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳಲ್ಲಿ ಮನವಿ ಮಾಡಿ ಕೊಂಡಿದ್ದರೂ ಯಾವದೇ ಸ್ಪಂದನ ದೊರೆಯದ ಕಾರಣ ತಾ.27 ರಂದು ಪ್ರತಿಭಟನೆ ನಡೆಸುತ್ತಿರುವದಾಗಿ ತಿಳಿಸಿದರು. ವಿವಿಧ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವದು. ವಿಲೇವಾರಿಗೆ ಬಾಕಿ ಇರುವ ಕಡತಗಳ ಬಗ್ಗೆ ಜಿಲ್ಲಾಧಿಕಾರಿ ಗಳಿಗೆ ಮಾಹಿತಿ ನೀಡಲಾಗುವದು ಎಂದು ಫಾತಿಮಾ ಹೇಳಿದರು.

ರಸ್ತೆ ಬದಿ ವ್ಯಾಪಾರಿಗಳಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅನುಮತಿ ನೀಡದೆ ನಗರಸಭೆ ಸತಾಯಿಸುತ್ತಿದೆ. ವಿವಿಧ ಕಚೇರಿಗಳಲ್ಲಿ ಅಧಿಕಾರಿಗಳು ಜನಸಾಮಾನ್ಯರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಗೆ ಕೂಡ ಸಕಾಲದಲ್ಲಿ ಉತ್ತರ ದೊರೆಯುತ್ತಿಲ್ಲ ವೆಂದು ಅವರು ಆರೋಪಿಸಿದರು.

ಪ್ರತಿಭಟನೆಗೆ ಜಿಲ್ಲಾಡಳಿತ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಫಾತಿಮಾ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ರೈತ ವಿಭಾಗದ ರಾಜ್ಯ ಕಾರ್ಯದರ್ಶಿ ಪಾರ್ವತಿ, ತಾಲೂಕು ಕಾರ್ಯದರ್ಶಿ ಪ್ರೇಮಲತಾ, ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಪೈ, ಅನಿತಾ ಹಾಗೂ ಗಣೇಶ್ ಕುಮಾರ್ ಉಪಸ್ಥಿತರಿದ್ದರು.