ಕುಶಾಲನಗರ, ಸೆ. 13: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಜಯಲಲಿತಾ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರತಿಕೃತಿ ದಹಿಸಿ ಆಕ್ರೋಷ ವ್ಯಕ್ತಪಡಿಸಲಾಯಿತು. ಬಳಿಕ ರಾಜ್ಯ ಹೆದ್ದಾರಿಯಲ್ಲಿ ಕುಳಿತ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಕರವೇ ಜಿಲ್ಲಾ ಉಪಾಧ್ಯಕ್ಷ ಬಿ.ಎ.ನಾಗೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎ.ದಿನೇಶ್, ಕಾರ್ಯದರ್ಶಿ ಸತೀಶ್ಕುಮಾರ್, ಪದಾಧಿಕಾರಿಗಳಾದ ದೇವೇಂದ್ರ, ರಂಗಸ್ವಾಮಿ, ರೀಟಾ, ಉಮಾಪ್ರಭಾಕರ್, ಶಾಂತಿ, ಮೂರ್ತಿ, ಉದಯ ಮತ್ತಿತರರು ಇದ್ದರು. ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಕೊಪ್ಪ ಗೇಟ್ ಬಳಿ ಪ್ರತಿಭಟಿಸಲಾಯಿತು.
ಸಮಿತಿಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಡಿ. ಅಣ್ಣಯ್ಯ ನೇತೃತ್ವದಲ್ಲಿ ಕುಶಾಲನಗರದ ಕೊಪ್ಪ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ರೈತ ವಿರೋಧಿ ನೀತಿಯ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೆರವಣಿಗೆ ಮೂಲಕ ಕೊಪ್ಪ ಕಾವೇರಿ ಪ್ರತಿಮೆ ಬಳಿ ತೆರಳಿ ಸ್ವಲ್ಪಕಾಲ ರಸ್ತೆ ತಡೆ ನಡೆಸಿದರು. ತಕ್ಷಣ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಸ್ಥಗಿತಗೊಳಿಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಕೆ.ಟಿ.ಈರಯ್ಯ, ಉಪಾಧ್ಯಕ್ಷ ಗಣೇಶ್, ಕಾರ್ಯದರ್ಶಿಗಳಾದ ಗೋವಿಂದ, ಕೃಷ್ಣ, ದೇವರಾಜ್, ಅರುಣ, ರವಿ ಮತ್ತಿತರರು ಇದ್ದರು.